ಮಂಗಳೂರು: ದೇರಳಕಟ್ಟೆಯ ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ ಅಕ್ಟೋಬರ್ 27 ಮತ್ತು 28ರಂದು ‘ಪ್ರೇರಣಾ ವಿಜ್ಞಾನೋತ್ಸವ–2026’ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ವಂ. ಫಾ. ಫಾಸ್ಟಿನ್ ಲೂಕಾಸ್ ಲೋಬೋ ತಿಳಿಸಿದರು.

ನಗರದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 50ಕ್ಕೂ ಹೆಚ್ಚು ಶಾಲೆ ಹಾಗೂ ಪಿಯು ಕಾಲೇಜುಗಳ 4,000ಕ್ಕೂ ಅಧಿಕ ವಿದ್ಯಾರ್ಥಿಗಳು ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ವಿಜ್ಞಾನ ವಸ್ತುಪ್ರದರ್ಶನ, ರಸಪ್ರಶ್ನೆ, ಚರ್ಚಾಸ್ಪರ್ಧೆ, ಕೃತಕ ಬುದ್ಧಿಮತ್ತೆ ಆಧಾರಿತ ಸ್ಪರ್ಧೆಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ₹1.80 ಲಕ್ಷ ಮೌಲ್ಯದ ಬಹುಮಾನಗಳನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಸಿಪಿಆರ್, ಪ್ರಥಮ ಚಿಕಿತ್ಸೆ, ಡಿಎನ್‌ಎ ಪ್ರತ್ಯೇಕಿಸುವಿಕೆ ಸೇರಿದಂತೆ ವಿವಿಧ ವಿಷಯಗಳಲ್ಲಿ ಪ್ರಾಯೋಗಿಕ ತರಬೇತಿಯನ್ನೂ ನೀಡಲಾಗುತ್ತದೆ. ವಿಜ್ಞಾನ ವಸ್ತುಪ್ರದರ್ಶನಕ್ಕೆ ಉಚಿತ ಪ್ರವೇಶವಿದೆ.

ಅಕ್ಟೋಬರ್ 27ರಂದು ಬೆಳಿಗ್ಗೆ 10ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಚಿವ ಯು.ಟಿ. ಖಾದರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ವಂ. ಫಾ. ಡೊನಾಲ್ಡ್ ನಿಲೇಶ್ ಕ್ರಾಸ್ತಾ, ವಂ. ಫಾ. ನೆಲ್ಸನ್ ಧೀರಜ್ ಪಾಯಸ್, ಡಾ. ಪ್ರಭು ಕಿರಣ್ , ಡಾ. ಸತೀಶ್ ಸಹಿತ ಮತ್ತಿತರರು ಉಪಸ್ಥಿತರಿದ್ದರು.

