ಆಂಧ್ರ ಪ್ರದೇಶದಲ್ಲಿ ಚಂಡಮಾರುತದ ಅಬ್ಬರ: ಜನಜೀವನ ಅಸ್ತವ್ಯಸ್ತ

ಅಮರಾವತಿ: ಆಂಧ್ರಪ್ರದೇಶದ ಕರಾವಳಿಗೆ ಬುಧವಾರ ಮುಂಜಾನೆ ಅತ್ಯಂತ ತೀವ್ರ ಸ್ವರೂಪದ ಅರ್ನಬ್ ಚಂಡಮಾರುತ ಅಪ್ಪಳಿಸಿದ್ದು, ಗಂಟೆಗೆ 135 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಪ್ರವಾಹದಲ್ಲಿ ಸಿಲುಕಿದ್ದ ನಾಲ್ವರನ್ನು ಪೊಲೀಸರು ರಕ್ಷಿಸಿದ್ದಾರೆ.

ಅನಕಾಪಲ್ಲಿ, ವಿಶಾಖಪಟ್ಟಣಂ ಮತ್ತು ವಿಜಯನಗರಂ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ 200 ಮಿ.ಮೀ.ಗೂ ಅಧಿಕ ಮಳೆಯಾಗಿದೆ. ಅನಕಾಪಲ್ಲಿಯ ಕಣ್ಣೂರಿಪಾಲೆಂನಲ್ಲಿ ಗರಿಷ್ಠ 261.5 ಮಿ.ಮೀ. ಮಳೆ ದಾಖಲಾಗಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ 609 ಶಾಲೆಗಳನ್ನು ಪುನರ್ವಸತಿ ಕೇಂದ್ರಗಳಾಗಿ ಪರಿವರ್ತಿಸಲಾಗಿದ್ದು, 854 ಜನರಿಗೆ ಆಶ್ರಯ ಕಲ್ಪಿಸಲಾಗಿದೆ.

ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿ ಪರಿಶೀಲಿಸಿದ್ದು, ಧರೆಗುರುಳಿದ ಮರಗಳನ್ನು ತೆರವುಗೊಳಿಸಲು ಹಾಗೂ ವಿದ್ಯುತ್ ಪೂರೈಕೆಯನ್ನು ಪುನಃಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳು ಮತ್ತು ದಕ್ಷಿಣ ಒಡಿಶಾದ ಕೆಲವು ಭಾಗಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!