ಕಾಪು ಬೀಚ್‌ನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ

ಉಡುಪಿ: ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಕಾಪು ಪೊಲೀಸರು ಬಂಧಿಸಿದ್ದು, ₹2.85 ಲಕ್ಷ ಮೌಲ್ಯದ 5.710 ಕೆ.ಜಿ. ಗಾಂಜಾ ಸೇರಿದಂತೆ ನಗದು ಮತ್ತು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಕಾಪು ತಾಲೂಕಿನ ಬೆಳಪು ಗ್ರಾಮದ ವಿನಯನಗರ ನಿವಾಸಿ ಆರೀಫ್ (38) ಹಾಗೂ ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದ ಹೂಡೆ ನಿವಾಸಿ ಅಕೀಫ್ (34) ಎಂದು ಗುರುತಿಸಲಾಗಿದೆ.


ಅಕ್ಟೋಬರ್ 27ರಂದು ಕಾಪು ಪೊಲೀಸ್ ವೃತ್ತ ನಿರೀಕ್ಷಕ ಅಜ್ಮತ್ ಆಲಿ ಅವರಿಗೆ ದೊರೆತ ಖಚಿತ ಮಾಹಿತಿಯಂತೆ, ಉಳಿಯಾರಗೋಳಿ ಗ್ರಾಮದ ಯಾರ್ಡ್ ಬೀಚ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮಧ್ಯಾಹ್ನ 12.05ರ ಸುಮಾರಿಗೆ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಗಳು ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ತಮ್ಮ ವಶದಲ್ಲಿಟ್ಟುಕೊಂಡಿರುವುದು ಪತ್ತೆಯಾಗಿದೆ.

ಆರೋಪಿಗಳಿಂದ 5.710 ಕೆ.ಜಿ. ಗಾಂಜಾ, ₹225 ನಗದು ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಆಂಧ್ರಪ್ರದೇಶದ ಹೈದರಾಬಾದ್‌ನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದುದಾಗಿ ವಿಚಾರಣೆ ವೇಳೆ ಬಹಿರಂಗ ಪಡಿಸಿದ್ದಾರೆ. ಇಬ್ಬರೂ ಈ ಹಿಂದೆಯೂ ವಿವಿಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ಉಪವಿಭಾಗದ ಎಎಸ್ಪಿ ಈಶಿತಾ ಗುಪ್ತಾ ಹಾಗೂ ಕಾಪು ವೃತ್ತ ನಿರೀಕ್ಷಕ ಅಜ್ಮತ್ ಆಲಿ ಅವರ ಮಾರ್ಗದರ್ಶನದಲ್ಲಿ, ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕ ತೇಜಸ್ವಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಕಾಪು ಠಾಣೆಯ ಪೊಲೀಸ್ ಸಿಬ್ಬಂದಿ, ಕಾರ್ಕಳ ಉಪವಿಭಾಗದ ಆ್ಯಂಟಿ ಎನ್‌ಡಿಪಿಎಸ್ ದಳದ ಸಿಬ್ಬಂದಿ, ಸಿಡಿಆರ್ ತಾಂತ್ರಿಕ ವಿಭಾಗದ ಸಿಬ್ಬಂದಿ ಹಾಗೂ ಸೊಕೊ ಅಧಿಕಾರಿಗಳು ಕಾರ್ಯಾಚರಣೆಗೆ ಸಹಕರಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!