ಕಾಸರಗೋಡು: ಗಡಿನಾಡು ಕಾಸರಗೋಡಿನ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ವತಿಯಿಂದ ನೀಡಲಾಗುವ 2026ನೇ ಸಾಲಿನ ಅಂತಾರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆರೋಗ್ಯ ಕ್ಷೇತ್ರದ ಸಾಧಕ, ಮಂಗಳೂರಿನ ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿಕಾರಿ (ಆರ್ಸಿಎಚ್ಒ) ಡಾ. ರಾಜೇಶ್ ಬಿ.ವಿ. ಅವರು ಆಯ್ಕೆಯಾಗಿದ್ದಾರೆ.

ನವೆಂಬರ್ 1ರಂದು ಬೆಳಿಗ್ಗೆ 10 ಗಂಟೆಗೆ ಕನ್ನಡ ಭವನದ ಕನ್ನಡ ಭುವನೇಶ್ವರಿ ವೇದಿಕೆಯಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕರ್ನಾಟಕ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯ ಕನ್ನಡ ಸಂಘದ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅಂತಾರಾಜ್ಯ ಮಟ್ಟದ 10 ಮಂದಿ ಸಾಧಕರಿಗೆ ಈ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಠಲದಾಸ್ ಬೇಕಲ್ ಮತ್ತು ನಾರಾಯಣಿ ಬೇಕಲ್ ದಂಪತಿಯ ಪುತ್ರರಾದ ಡಾ. ರಾಜೇಶ್ ಬಿ.ವಿ. ಅವರು ತಮ್ಮ ಶಾಲಾ ಶಿಕ್ಷಣವನ್ನು ಉಡುಪಿಯ ಸರ್ಕಾರಿ ಸೌತ್ ಶಾಲೆಯಲ್ಲಿ ಪೂರೈಸಿದರು. ಬಳಿಕ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದ ಅವರು, ಬಳ್ಳಾರಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪಡೆದರು.

ವೈದ್ಯಕೀಯ ಶಿಕ್ಷಣ ಪೂರ್ಣಗೊಳಿಸಿದ ಬಳಿಕ 1995ರ ಜೂನ್ನಿಂದ 1996ರ ಮೇ ತಿಂಗಳವರೆಗೆ ಕಾಸರಗೋಡು ಸರ್ಕಾರಿ ಆಸ್ಪತ್ರೆಯಲ್ಲಿ ಒಂದು ವರ್ಷ ಸೇವೆ ಸಲ್ಲಿಸಿದರು. ನಂತರ ಹತ್ತು ವರ್ಷಗಳ ಕಾಲ ಕುಕ್ಕೆ ಸುಬ್ರಹ್ಮಣ್ಯದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸಿದರು.
ಆ ಬಳಿಕ ಮುಂಬಡ್ತಿ ಪಡೆದು ಮಂಗಳೂರಿನಲ್ಲಿ ಆರೋಗ್ಯ ಇಲಾಖೆಯ ಜಿಲ್ಲಾ ಕಣ್ಗಾವಲು ಅಧಿಕಾರಿಯಾಗಿ (ಡಿಸ್ಟ್ರಿಕ್ಟ್ ಸರ್ವೆಲೆನ್ಸ್ ಆಫೀಸರ್) ಸೇವೆ ಸಲ್ಲಿಸಿದರು. ಪ್ರಸ್ತುತ ಮಂಗಳೂರಿನಲ್ಲಿ ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಡಾ. ರಾಜೇಶ್ ಅವರು ಈ ಹಿಂದೆಯೂ ಹಲವು ಗೌರವಗಳಿಗೆ ಪಾತ್ರರಾಗಿದ್ದಾರೆ. 2014ರಲ್ಲಿ ಗಣರಾಜ್ಯೋತ್ಸವದ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ‘ಸರ್ವೋತ್ತಮ ಸೇವಾ ಪ್ರಶಸ್ತಿ’ ಪಡೆದಿದ್ದರು. 2015ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರಾಜ್ಯಮಟ್ಟದ ‘ವೈದ್ಯಶ್ರೀ’ ಪ್ರಶಸ್ತಿಯನ್ನು ಸ್ವೀಕರಿಸಿದ್ದರು.

