ಪ್ರದೀಪ್ ಪೂಜಾರಿ ಪ್ರಕರಣ: ಸಂತ್ರಸ್ತೆಯ ತೇಜೋವಧೆ ಮಾಡಿದರೆ ಕಠಿಣ ಕ್ರಮ

ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಅತ್ಯಾಚಾರ ಸಂತ್ರಸ್ತೆಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುತ್ತಿರುವ 150 ಖಾತೆಗಳನ್ನು ಪೊಲೀಸರು ಗುರುತಿಸಿದ್ದಾರೆ. ಸಂತ್ರಸ್ತೆಯ ಖಾಸಗಿ ಫೋಟೊಗಳನ್ನು ಹಂಚಿಕೊಂಡು ಮಾನಹಾನಿ ಮಾಡಿರುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೊ, ಆಡಿಯೊ ಹಾಗೂ ವೈಜ್ಞಾನಿಕ ಸಾಕ್ಷ್ಯಗಳ ಕುರಿತು ಮಾಹಿತಿ ನೀಡಿದ ಅವರು, ಘಟನೆಯ ಸಂಪೂರ್ಣ ಸತ್ಯಾಂಶ ತಿಳಿಯದೆ ಸಂತ್ರಸ್ತೆಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳನ್ನು ಪ್ರಕಟಿಸುವುದು ಖಂಡನೀಯ ಎಂದರು. ಪ್ರದೀಪ್ ಪೂಜಾರಿಗೆ ನ್ಯಾಯ ಒದಗಿಸುವ ಹೆಸರಿನಲ್ಲಿ ಸಂತ್ರಸ್ತೆಗೆ ಅನ್ಯಾಯ ಮಾಡಲು ಅವಕಾಶ ನೀಡುವುದಿಲ್ಲ. ಇಂತಹ ಅಪಪ್ರಚಾರದಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರು ದೂರು ನೀಡಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಹೇಳಿದರು.

2020ರ ನವೆಂಬರ್‌ನಲ್ಲಿ ಯುವತಿಯನ್ನು ಅಡ್ಡಗಟ್ಟಿ ಮದುವೆಯಾಗುವಂತೆ ಒತ್ತಾಯಿಸಿ ಕೊಲೆ ಬೆದರಿಕೆ ಹಾಕಿದ ಆರೋಪದಡಿ ಪ್ರದೀಪ್ ವಿರುದ್ಧ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ 2025ರ ನವೆಂಬರ್ 29ರಂದು ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿತ್ತು. ಸಂತ್ರಸ್ತೆಯ ಹೇಳಿಕೆ, ವೈದ್ಯಕೀಯ ವರದಿ ಹಾಗೂ ವೈಜ್ಞಾನಿಕ ಸಾಕ್ಷ್ಯಗಳ ಆಧಾರದಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಎಸ್ಪಿ ತಿಳಿಸಿದರು.

2026ರ ಅಕ್ಟೋಬರ್ 28ರಂದು ಯುವತಿಯ ಮನೆಗೆ ಬಂದ ಪ್ರದೀಪ್ ಖಾರದ ಪುಡಿ ಹಾಗೂ ಬಟ್ಟೆಗಳನ್ನು ತಂದಿದ್ದು, ಆಕೆಯ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾನೆ ಎಂಬ ಆರೋಪವಿದೆ. ಈ ವೇಳೆ ಆಕೆಯ ತಾಯಿಯ ಕಣ್ಣಿಗೂ ಖಾರದ ಪುಡಿ ಎರಚಿದ್ದಾನೆ. ಘಟನೆಯ ಆಡಿಯೊ ಮತ್ತು ವಿಡಿಯೊ ದಾಖಲೆಗಳು ಪೊಲೀಸರ ಬಳಿ ಇವೆ. ಪ್ರದೀಪ್‌ನನ್ನು ಅಪಹರಿಸಿ ಹಲ್ಲೆ ನಡೆಸಲಾಗಿದೆ ಎಂಬ ಸಾಮಾಜಿಕ ಜಾಲತಾಣಗಳ ಆರೋಪಕ್ಕೆ ತನಿಖೆಯಲ್ಲಿ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ. ಆತ ತಂದಿದ್ದ ಬಟ್ಟೆ ಹಾಗೂ ಖಾರದ ಪುಡಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಹಿರಿಯಡ್ಕ ಎಸ್ಸೈ ವಿರುದ್ಧ ಶಿಸ್ತು ಕ್ರಮ

ಪ್ರದೀಪ್ ಮೇಲೆ ಹಲ್ಲೆ ನಡೆದಿರುವ ಕುರಿತು ದೂರು ನೀಡಿದರೂ ಹಿರಿಯಡ್ಕ ಠಾಣೆಯ ಎಸ್ಸೈ ನೇರವಾಗಿ ಎಫ್‌ಐಆರ್ ದಾಖಲಿಸದೆ ಕರ್ತವ್ಯ ಲೋಪ ಎಸಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಪಶ್ಚಿಮ ವಲಯ ಐಜಿಪಿ ಅವರಲ್ಲಿ ವರದಿ ಮಾಡುವಂತೆ ಸೂಚಿಸಲಾಗಿದೆ. ಹೆಚ್ಚುವರಿ ಎಸ್ಪಿ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದ್ದು, ಹೆಚ್ಚಿನ ಲೋಪ ಕಂಡುಬಂದರೆ ಮತ್ತಷ್ಟು ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಆರೋಪಿಗಳ ಪತ್ತೆಗೆ ನಾಲ್ಕು ತಂಡಗಳು

ಪ್ರದೀಪ್ ಪೂಜಾರಿ ಮೇಲೆ ಹಲ್ಲೆ ನಡೆಸಿದ ಹಾಗೂ ಆತನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಕ್ಕೆ ಸಂಬಂಧಿಸಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಪ್ರಕರಣಗಳ ತನಿಖೆಯನ್ನು ಹಿರಿಯಡ್ಕ ಠಾಣೆಯ ಬದಲಾಗಿ ಮಣಿಪಾಲ ಪೊಲೀಸ್ ಠಾಣೆಯ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ನಡೆಸಲಾಗುತ್ತಿದೆ. ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಎಸ್ಪಿ ಹರಿರಾಂ ಶಂಕರ್ ಎಚ್ಚರಿಕೆ ನೀಡಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!