ಕೊಳ್ನಾಡು: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಅವುಗಳನ್ನು ಪ್ರದರ್ಶಿಸಲು ಸೂಕ್ತ ವೇದಿಕೆ ಹಾಗೂ ಅವಕಾಶಗಳನ್ನು ಕಲ್ಪಿಸಿಕೊಡುವುದು ಅಗತ್ಯ. ಮಕ್ಕಳ ಪ್ರತಿಭೆಗಳು ನಾಲ್ಕು ಗೋಡೆಗಳ ಮಧ್ಯೆ ಬಂಧಿಯಾಗದೆ ಸಮಾಜದ ಮುಂದೆ ಅನಾವರಣಗೊಳ್ಳಬೇಕು ಎಂದು ಪಂಚಾಯತ್ ರಾಜ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹಾಗೂ ಕುಳಾಲು ಶಾಲೆಯ ಹಳೆ ವಿದ್ಯಾರ್ಥಿ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಹೇಳಿದರು.



ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ಕೊಳ್ನಾಡು ಹಾಗೂ ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುಳಾಲು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಕೊಳ್ನಾಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ಸಾಮರ್ಥ್ಯವನ್ನು ಕೇವಲ ವಿದ್ಯಾಭ್ಯಾಸದ ಅಂಕಗಳ ಆಧಾರದಲ್ಲಿ ಅಳೆಯಲು ಸಾಧ್ಯವಿಲ್ಲ. ಪ್ರತಿಯೊಂದು ಮಗುವಿನಲ್ಲೂ ಕಲೆ, ಸಾಹಿತ್ಯ, ಸಂಗೀತ, ನೃತ್ಯ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರತಿಭೆಗಳು ಅಡಗಿರುತ್ತವೆ. ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಾತ್ರ ಮಕ್ಕಳ ವ್ಯಕ್ತಿತ್ವದ ಸಮಗ್ರ ವಿಕಸನ ಸಾಧ್ಯವಾಗುತ್ತದೆ ಎಂದರು.

ಸರಕಾರಿ ಶಾಲೆಗಳಲ್ಲಿ ನಡೆಯುವ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಗ್ರಾಮೀಣ ಭಾಗದ ಮಕ್ಕಳಿಗೆ ತಮ್ಮ ಪ್ರತಿಭೆಗಳನ್ನು ಗುರುತಿಸಿಕೊಳ್ಳಲು ಹಾಗೂ ಪ್ರದರ್ಶಿಸಲು ಉತ್ತಮ ವೇದಿಕೆಯಾಗಿವೆ. ಶಿಕ್ಷಣವೆಂದರೆ ಕೇವಲ ಪಠ್ಯಪುಸ್ತಕದ ಜ್ಞಾನ ಮತ್ತು ಪರೀಕ್ಷೆಯ ಅಂಕಗಳಲ್ಲ. ಮಕ್ಕಳಲ್ಲಿ ಸೃಜನಶೀಲತೆ, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಜೀವನ ಕೌಶಲ್ಯಗಳನ್ನು ಬೆಳೆಸುವುದೂ ಶಿಕ್ಷಣದ ಪ್ರಮುಖ ಉದ್ದೇಶವಾಗಿದೆ ಎಂದು ಅಭಿಪ್ರಾಯಪಟ್ಟರು.
ವಿದ್ಯಾಭ್ಯಾಸದ ಜೊತೆಗೆ ಕಲೆ, ಸಾಹಿತ್ಯ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಕ್ಕಳ ಆಸಕ್ತಿ ಮತ್ತು ಪ್ರತಿಭೆಯನ್ನು ಬೆಳೆಸಬೇಕು. ಇಂದು ಪ್ರತಿಭಾ ಕಾರಂಜಿಯ ವೇದಿಕೆಯಲ್ಲಿ ಗುರುತಿಸಿಕೊಳ್ಳುವ ಮಗು ನಾಳೆ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಅವಕಾಶ ಹೊಂದಿರುತ್ತದೆ. ಈ ನಿಟ್ಟಿನಲ್ಲಿ ಪೋಷಕರು ಮಕ್ಕಳ ಆಸಕ್ತಿಗೆ ಪ್ರೋತ್ಸಾಹ ನೀಡಬೇಕು, ಶಿಕ್ಷಕರು ಪ್ರತಿಭೆಗಳಿಗೆ ನೀರೆರೆಯಬೇಕು ಹಾಗೂ ಸಮಾಜ ಇಂತಹ ಪ್ರತಿಭೆಗಳಿಗೆ ಬೆಂಬಲವಾಗಿ ನಿಲ್ಲಬೇಕು ಎಂದು ಕರೆ ನೀಡಿದರು.

ಮಕ್ಕಳು ಉತ್ತಮ ಶಿಕ್ಷಣ ಪಡೆದು ಪ್ರತಿಭಾವಂತ ಹಾಗೂ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಲಿ ಎಂದು ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್ಡಿಎಂಸಿ) ಅಧ್ಯಕ್ಷ ಶರೀಫ್ ಕೆ.ಎಚ್. ವಹಿಸಿದ್ದರು.
ಈ ಸಂದರ್ಭದಲ್ಲಿ ಕೊಳ್ನಾಡು ಕ್ಲಸ್ಟರ್ ಸಿಆರ್ಪಿ ರಮೇಶ್, ರಮೇಶ್ ಕಾಮತ್, ಆನಂದ ಪೂಜಾರಿ ಕುಳಾಲು, ಶಶಿ ಬಿ., ನಾಗರಾಜ ಪದಕಣ್ಣಾಯ, ಶಂಕರ ಎಸ್., ದಾಮೋದರ ಏರ್ಯ, ಎವ್ಜಿತಾ ಡಿ. ಸೋಜ, ಜೆಸಿಂತಾ ಡಿ. ಸೋಜ, ಎ. ತಿಮ್ಮು, ಪರಮೇಶ್ವರ ಆಚಾರ್ಯ ಮಂಕುಡೆ ನೆಡ್ಯಾಳ, ಕರಿಸಿದ್ದಪ್ಪ ಕಳ್ಳೆಪ್ಪನವರ್, ಸವಿತಾ ರೈ, ಪ್ಲೇವಿಯನ್ ಡಿ. ಸೋಜ, ಸಂಧ್ಯಾ ಹಾಗೂ ಡೆಸಿನಾ ಡಿ. ಸೋಜ ಸೇರಿದಂತೆ ಶಿಕ್ಷಕರು, ಗಣ್ಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

