
ಮಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆ ಮಾಡಿರುವ ಸರ್ಕಾರದ ಕ್ರಮ ಖಂಡನೀಯ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಹೆಸರಿನಲ್ಲಿ ಸಾರಿಗೆ ಸಂಸ್ಥೆಗಳನ್ನು ನಷ್ಟದ ಸುಳಿಗೆ ಸಿಲುಕಿಸಿ, ಇದೀಗ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರ ಹೆಚ್ಚಿಸಿರುವುದು ಜನವಿರೋಧಿ ನೀತಿಯಾಗಿದೆ ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಒಂದು ಕೈಯಲ್ಲಿ ಕೊಟ್ಟು, ಎರಡು ಕೈಗಳಲ್ಲಿ ಕಸಿದುಕೊಳ್ಳುವ ನೀತಿ ಅನುಸರಿಸುತ್ತಿದೆ. ಉಚಿತ ಸೌಲಭ್ಯಗಳ ಭ್ರಮೆಯಲ್ಲಿ ಜನರ ತಿಂಗಳ ಆದಾಯವನ್ನು ಬೆಲೆ ಏರಿಕೆಯ ಮೂಲಕ ಸರ್ಕಾರ ಮತ್ತು ಮಾರುಕಟ್ಟೆ ಮತ್ತೆ ಕಸಿದುಕೊಳ್ಳುತ್ತಿವೆ. ಇದು ಕಲ್ಯಾಣ ರಾಜ್ಯದ ಲಕ್ಷಣವಲ್ಲ. ಬದಲಾಗಿ ಬಡವರು ಮತ್ತು ಮಧ್ಯಮ ವರ್ಗದ ಜನರನ್ನು ಆರ್ಥಿಕ ಸಂಕಷ್ಟಕ್ಕೆ ದೂಡುವ ನೀತಿಯಾಗಿದೆ ಎಂದು ಟೀಕಿಸಿದರು.

ಸರ್ಕಾರದ ನಿರಂತರ ಬೆಲೆ ಏರಿಕೆಯಿಂದ ಜನಸಾಮಾನ್ಯರ ಜೀವನ ನಿರ್ವಹಣೆ ಕಷ್ಟಕರವಾಗುತ್ತಿದೆ. ಜನವಿರೋಧಿ ಬೆಲೆ ಏರಿಕೆ ನೀತಿಯನ್ನು ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಎಸ್ಡಿಪಿಐ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಎಸ್ಡಿಪಿಐ ಮಂಗಳೂರು ನಗರ ಜಿಲ್ಲಾ ಅಧ್ಯಕ್ಷ ಮಹಮ್ಮದ್ ಅಶ್ರಫ್ ಅಡ್ಡೂರು ಹಾಗೂ ಉಪಾಧ್ಯಕ್ಷ ಅಝೀಝ್ ಸುರತ್ಕಲ್ ಉಪಸ್ಥಿತರಿದ್ದರು.

