ಮಂಗಳೂರು: ಕರಾವಳಿಯ ಹೆಸರಾಂತ ಹಾಸ್ಯ ಕಲಾವಿದರ ದಂಡನ್ನೇ ಹೊಂದಿರುವ ‘ವಾದಿರಾಜ ವಾಲಗ ಮಂಡಳಿ’ (ವಿವಿಎಮ್) ಕನ್ನಡ ಚಲನಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡಿದ್ದು, ಡಿಸೆಂಬರ್ ತಿಂಗಳ ಕೊನೆಯಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಎಂ.ಎನ್.ಆರ್. ಪ್ರೊಡಕ್ಷನ್ ಬ್ಯಾನರ್ನಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಸಂಬಂಧಿಸಿದಂತೆ ಇಂದು ಚಿತ್ರದ ಪೋಸ್ಟರ್ ಅನಾವರಣಗೊಳಿಸುವ ಮೂಲಕ ಪ್ರೇಕ್ಷಕರಿಗೆ ಚಿತ್ರದ ಮೊದಲ ನೋಟವನ್ನು ಪರಿಚಯಿಸಲಾಯಿತು. ಈ ಹಿಂದೆ ಇದೇ ಸಂಸ್ಥೆ ಯಶಸ್ವಿ ಸಿನಿಮಾ ‘ಗಲಾಟೆ’ ಹಾಗೂ ‘ಜೋಗುಳ’ ಧಾರಾವಾಹಿಯನ್ನು ನಿರ್ಮಿಸಿದ್ದು, ಉತ್ತಮ ಅಭಿರುಚಿಯ ಕನ್ನಡ ಚಿತ್ರಗಳನ್ನು ನಿರ್ಮಿಸುವಲ್ಲಿ ಆಸಕ್ತಿ ಹೊಂದಿದೆ.

ಬ್ರಹ್ಮಾವರ, ಮಂಗಳೂರು, ಮುಲ್ಕಿ, ಕಾಸರಗೋಡು ಸೇರಿದಂತೆ ಕರಾವಳಿಯ ವಿವಿಧ ಪ್ರದೇಶಗಳಲ್ಲಿ ಎರಡು ಹಂತಗಳಲ್ಲಿ ಸುಮಾರು 55 ದಿನಗಳ ಕಾಲ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಕರಾವಳಿ ಕನ್ನಡದ ಸೊಗಡಿನಲ್ಲಿ ಮೂಡಿಬಂದಿರುವ ‘ವಿವಿಎಮ್’ ಸಂಪೂರ್ಣ ಹಾಸ್ಯಮಯ ಹಾಗೂ ಕುತೂಹಲಭರಿತ ಕಥಾಹಂದರ ಹೊಂದಿದ್ದು, ಕುಟುಂಬ ಸಮೇತರಾಗಿ ಕುಳಿತು ವೀಕ್ಷಿಸಬಹುದಾದ ಮನರಂಜನಾತ್ಮಕ ಚಿತ್ರವಾಗಿದೆ.

ಗುಂಡುಮಾಮ ಖ್ಯಾತಿಯ ನವೀನ್ ಡಿ. ಪಡೀಲ್, ‘ಸು ಫ್ರಮ್ ಸೊ’ ಖ್ಯಾತಿಯ ಪ್ರಕಾಶ್ ತುಮಿನಾಡು, ದೀಪಕ್ ರೈ ಪಾಣಾಜೆ, ಪುಷ್ಪರಾಜ್ ಬೊಳ್ಳಾರು, ಮೈಮ್ ರಾಮದಾಸ್, ಗೋಪಿನಾಥ್ ಭಟ್, ಶೋಭರಾಜ್ ಪಾವೂರು, ಲಕ್ಷ್ಮಣ ಮಲ್ಲೂರು ಸೇರಿದಂತೆ ಹಲವು ಪ್ರಮುಖ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಅರ್ಜುನ್ ವೇದಾಂತ್ ಹಾಗೂ ಅಥರ್ವ ಪ್ರಕಾಶ್ ನಾಯಕ ನಟರಾಗಿದ್ದು, ತನ್ವಿ ರಾವ್ ಮತ್ತು ವೇನ್ಯ ರೈ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.

ಅನುಭವಿ ಛಾಯಾಗ್ರಾಹಕ ಚೆನ್ನೈಯ ಎಸ್. ಚಂದ್ರಶೇಖರನ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆ ಮಾಡಿದ್ದು, ಸ್ಟಂಟ್ ಶಿವು ಸಾಹಸ ನಿರ್ದೇಶನ ಹಾಗೂ ವಿನಾಯಕ ಆಚಾರ್ಯ ನೃತ್ಯ ನಿರ್ದೇಶನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಜಯಪ್ರಕಾಶ್ ತುಂಬೆ ಸಹ ನಿರ್ಮಾಪಕರಾಗಿ ಕೈಜೋಡಿಸಿದ್ದಾರೆ. ಸಂತೋಷ್ ಶೆಟ್ಟಿ ಮತ್ತು ಲಕ್ಷ್ಮಣ ಕುಮಾರ್ ಮಲ್ಲೂರು ಕಾರ್ಯಕಾರಿ ನಿರ್ಮಾಪಕರಾಗಿ, ರಾಜೇಶ್ ಕುಡ್ಲ ಪ್ರೊಡಕ್ಷನ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಖ್ಯಾತ ಕಲಾವಿದ ದೇವಿ ಚಿತ್ರದ ಪೋಸ್ಟರ್ ವಿನ್ಯಾಸಗೊಳಿಸಿದ್ದಾರೆ.
‘ವರಾಹ ರೂಪಂ’ ಹಾಡಿನ ಮೂಲಕ ಖ್ಯಾತಿ ಪಡೆದ ನಟ, ನಿರ್ದೇಶಕ ಹಾಗೂ ಸಾಹಿತಿ ಶಶಿರಾಜ್ ಕಾವೂರು ಚಿತ್ರಕ್ಕೆ ಕಥೆ, ಚಿತ್ರಕಥೆ ರಚಿಸಿ ನಿರ್ದೇಶನ ಮಾಡಿದ್ದಾರೆ.

ಒಂಬತ್ತು ಹಾಡುಗಳ ಸಂಗೀತಮಯ ಚಿತ್ರ
‘ವಿವಿಎಮ್’ ಚಿತ್ರದಲ್ಲಿ ಒಟ್ಟು ಒಂಬತ್ತು ಹಾಡುಗಳಿದ್ದು, ಐದು ಪೂರ್ಣ ಪ್ರಮಾಣದ ಹಾಡುಗಳು ಹಾಗೂ ನಾಲ್ಕು ತುಣುಕು ಹಾಡುಗಳನ್ನು ಒಳಗೊಂಡಿದೆ. ‘ಬ್ರಹ್ಮಕಲಶ’ ಹಾಡಿನ ಗಾಯಕ ಕೆನಡಾ ಮೂಲದ ಅಭಿ ವಿ., ‘ವರಾಹರೂಪಂ’ ಹಾಡಿನ ಮೂಲಕ ಜನಪ್ರಿಯರಾದ ಚೆನ್ನೈ ಮೂಲದ ಸಾಯಿ ವಿಘ್ನೇಶ್, ಮೈಮ್ ರಾಮದಾಸ್, ಪ್ರಕಾಶ್ ಮಹಾದೇವನ್, ರವೀಂದ್ರ ಪ್ರಭು ಹಾಗೂ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಸೇರಿದಂತೆ ಹಲವು ಗಾಯಕರು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಚಿತ್ರದ ಎಲ್ಲಾ ಹಾಡುಗಳು ಉತ್ತಮವಾಗಿ ಮೂಡಿಬಂದಿವೆ ಎಂದು ಚಿತ್ರತಂಡ ತಿಳಿಸಿದೆ.
ಚಿತ್ರದ ಹಾಸ್ಯ ಮತ್ತು ಕಥೆಯಲ್ಲಿನ ಕುತೂಹಲ ಪ್ರೇಕ್ಷಕರಿಗೆ ಹೊಸ ಅನುಭವ ನೀಡಲಿದೆ ಎಂಬ ವಿಶ್ವಾಸ ಚಿತ್ರತಂಡಕ್ಕಿದೆ. ಕರಾವಳಿಯ ವಿಶಿಷ್ಟ ಸಂಭಾಷಣಾ ಶೈಲಿ ಹಾಗೂ ಸ್ಥಳೀಯ ಸಂಸ್ಕೃತಿಯ ಸೊಗಡು ಚಿತ್ರದ ಪ್ರಮುಖ ಆಕರ್ಷಣೆಗಳಾಗಿವೆ. ಚಿತ್ರದ ಮನರಂಜನಾ ಮೌಲ್ಯವನ್ನು ಗಮನದಲ್ಲಿಟ್ಟುಕೊಂಡು ಕೇರಳದ ಪ್ರೇಕ್ಷಕರನ್ನೂ ತಲುಪುವ ಉದ್ದೇಶದಿಂದ ಮಲಯಾಳಂ ಮತ್ತು ತಮಿಳು ಭಾಷೆಗಳಿಗೆ ಡಬ್ಬಿಂಗ್ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದ್ದು, ಪ್ರಗತಿಯಲ್ಲಿದೆ.

ಚಿತ್ರ ತೆರೆಗೆ ಬರಲು ಸಿದ್ಧವಾಗಿದ್ದರೂ, ಇತರ ಚಿತ್ರಗಳ ಬಿಡುಗಡೆಗೆ ಸ್ಪರ್ಧೆಯಾಗದಂತೆ ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಚಿತ್ರತಂಡ ತಿಳಿಸಿದೆ.
ಪೋಸ್ಟರ್ ಅನಾವರಣ ಕಾರ್ಯಕ್ರಮದಲ್ಲಿ ಸಹ ನಿರ್ಮಾಪಕ ಜಯಪ್ರಕಾಶ್ ತುಂಬೆ, ನಟ ಗೋಪಿನಾಥ್ ಭಟ್, ಕಾರ್ಯಕಾರಿ ನಿರ್ಮಾಪಕರಾದ ಲಕ್ಷ್ಮಣ ಮಲ್ಲೂರು, ಸಂತೋಷ್ ಶೆಟ್ಟಿ, ನಿರ್ದೇಶಕ ಶಶಿರಾಜ್ ಕಾವೂರು, ನಟ ನವೀನ್ ಡಿ. ಪಡೀಲ್, ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಸೇರಿದಂತೆ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು.

