
ಮಂಗಳೂರು:ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಕೊಡಿಯಾಲ್ ಬೈಲ್ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗೋ ಪೂಜೆ ಹಾಗೂ ಶ್ರೀ ಮಹಾಲಕ್ಷ್ಮೀ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.

ಪೂಜಾ ಕಾರ್ಯಕ್ರಮದ ಬಳಿಕ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭದಲ್ಲಿ ಜಿಲ್ಲೆಯ ಸಮಸ್ತ ಜನತೆ, ಬಿಜೆಪಿ ಕಾರ್ಯಕರ್ತರು, ಹಿತೈಷಿಗಳು ಹಾಗೂ ನಾಗರಿಕರಿಗೆ ಶುಭಾಶಯಗಳನ್ನು ಕೋರಿದರು. ಪ್ರತಿ ವರ್ಷದಂತೆ ಈ ಬಾರಿಯೂ ಪಕ್ಷದ ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳೊಂದಿಗೆ ಕಚೇರಿಯಲ್ಲಿ ದೀಪಾವಳಿ ಆಚರಿಸಲಾಗಿದೆ. ಧಾರ್ಮಿಕ ಸಂಪ್ರದಾಯದಂತೆ ಪುರೋಹಿತರ ಮೂಲಕ ಗೋ ಪೂಜೆ ಮತ್ತು ಮಹಾಲಕ್ಷ್ಮೀ ಪೂಜೆ ನೆರವೇರಿಸಲಾಗಿದ್ದು, ಜಿಲ್ಲೆಯ ಪ್ರತಿಯೊಬ್ಬರಿಗೂ ಒಳಿತಾಗಲಿ ಎಂಬ ಪ್ರಾರ್ಥನೆಯೊಂದಿಗೆ ಪೂಜೆ ಸಲ್ಲಿಸಲಾಗಿದೆ ಎಂದರು.

ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿ, ಗೋಮಾತೆಗೆ ತಾಯಿಯ ಸ್ಥಾನ ನೀಡುವ ಭಾರತೀಯ ಸಂಸ್ಕೃತಿಯಲ್ಲಿ ದೀಪಾವಳಿಯ ಸಂದರ್ಭದಲ್ಲಿ ಗೋ ಪೂಜೆ ನೆರವೇರಿಸುವುದು ವಿಶೇಷ ಮಹತ್ವ ಹೊಂದಿದೆ. ಕಳೆದ ಹಲವು ವರ್ಷಗಳಿಂದ ಬಿಜೆಪಿ ಕಚೇರಿಯಲ್ಲಿ ಈ ಸಂಪ್ರದಾಯವನ್ನು ನಿರಂತರವಾಗಿ ಪಾಲಿಸಿಕೊಂಡು ಬರಲಾಗುತ್ತಿದೆ. ಅಧಿಕಾರ ಅಥವಾ ಅವಕಾಶ ದೊರೆತಾಗ ಮಾತ್ರವಲ್ಲದೆ, ಗೋಮಾತೆಯ ಪೂಜೆಯನ್ನು ನಿರಂತರವಾಗಿ ಆಚರಿಸುವ ಪರಂಪರೆಯನ್ನು ಪಕ್ಷ ಬೆಳೆಸಿಕೊಂಡು ಬಂದಿದೆ ಎಂದು ಹೇಳಿದರು.

ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ವಿಚಾರಧಾರೆಗಳನ್ನು ಉಳಿಸಿ ಬೆಳೆಸುವ ಸಂಕಲ್ಪದೊಂದಿಗೆ ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯಬೇಕು. ಮುಂದಿನ ದಿನಗಳಲ್ಲಿ ಭಾರತೀಯ ಜನತಾ ಪಕ್ಷ ಇನ್ನಷ್ಟು ಬಲಿಷ್ಠವಾಗಬೇಕು. ರಾಜ್ಯ, ಜಿಲ್ಲೆ, ತಾಲೂಕು ಹಾಗೂ ಗ್ರಾಮಮಟ್ಟದಲ್ಲಿ ಕಮಲ ಅರಳಿಸುವ ಸಂಕಲ್ಪದೊಂದಿಗೆ ಪಕ್ಷದ ಎಲ್ಲ ಕಾರ್ಯಚಟುವಟಿಕೆಗಳು ಯಶಸ್ವಿಯಾಗಲಿ ಎಂದು ಹಾರೈಸಿದರು.

ದೀಪಾವಳಿ ಹಬ್ಬವು ರೈತಾಪಿ ವರ್ಗ, ಮಹಿಳೆಯರು, ಯುವಜನರು ಸೇರಿದಂತೆ ಸಮಾಜದ ಎಲ್ಲ ವರ್ಗದ ಜನರ ಬದುಕಿನಲ್ಲಿ ಸುಖ, ಶಾಂತಿ, ಸಮೃದ್ಧಿ ತರಲಿ. ತಾಯಿ ಮಹಾಲಕ್ಷ್ಮೀ ಎಲ್ಲರಿಗೂ ಆರ್ಥಿಕ ಶಕ್ತಿ, ಉತ್ತಮ ಆರೋಗ್ಯ, ದೀರ್ಘಾಯುಷ್ಯ ಕರುಣಿಸಲಿ ಹಾಗೂ ಪ್ರತಿಯೊಬ್ಬರ ಮನದ ಇಷ್ಟಾರ್ಥಗಳನ್ನು ಈಡೇರಿಸಲಿ ಎಂದು ಪ್ರಾರ್ಥಿಸಿ ಮಂಗಳೂರಿನ ಸಮಸ್ತ ಜನತೆಗೆ ದೀಪಾವಳಿ ಶುಭಾಶಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಕೆ. ಮೋನಪ್ಪ ಭಂಡಾರಿ, ಬಿಜೆಪಿ ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ರಮೇಶ್ ಹೆಗ್ಡೆ, ವಸಂತ ಜೆ. ಪೂಜಾರಿ, ಪೂರ್ಣಿಮಾ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


