ಉತ್ತರ ಪ್ರದೇಶದಲ್ಲಿ 1.27 ಕೋಟಿ ಹಿಂದೂ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ: ಯೋಗಿ ಆದಿತ್ಯನಾಥ್ ಆರೋಪ

ನವದೆಹಲಿ: ಉತ್ತರ ಪ್ರದೇಶದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಬಳಿಕ 1.27 ಕೋಟಿ ಹಿಂದೂ ಮತದಾರರ ಹೆಸರುಗಳು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ. ಇದೇ ವೇಳೆ ಮುಸ್ಲಿಂ ಮತದಾರರ ಸಂಖ್ಯೆಯಲ್ಲಿ ಶೇ.1.65ರಷ್ಟು ಏರಿಕೆಯಾಗಿದೆ ಎಂದೂ ಅವರು ಹೇಳಿದ್ದಾರೆ.

ಪಂಚಾಯತ್ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಹೆಸರುಗಳಿದ್ದರೂ ಕೇಂದ್ರ ಚುನಾವಣಾ ಆಯೋಗದ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿರುವವರನ್ನು ಮತ್ತೆ ಸೇರ್ಪಡೆಗೊಳಿಸಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ ಎಂದು ಯೋಗಿ ತಿಳಿಸಿದ್ದಾರೆ.

“ಉತ್ತರ ಪ್ರದೇಶದ ಪಂಚಾಯತ್ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಹೆಸರುಗಳಿದ್ದರೂ ಕೇಂದ್ರ ಚುನಾವಣಾ ಆಯೋಗದ ಪಟ್ಟಿಯಲ್ಲಿ ಹೆಸರುಗಳಿಲ್ಲದ 1.27 ಕೋಟಿ ಹಿಂದೂ ಮತದಾರರ ಬಗ್ಗೆ ನಾನು ಮಾತನಾಡುತ್ತಿದ್ದೇನೆ. ಈ ಹೆಸರುಗಳು ಹೇಗೆ ಕಣ್ಮರೆಯಾದವು? ಇದರ ಹಿಂದೆ ಯಾರಿದ್ದಾರೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಇಂತಹ 66 ಲಕ್ಷ ಮತದಾರರ ಹೆಸರುಗಳು ಪಂಚಾಯತ್ ಮತದಾರರ ಪಟ್ಟಿಯಲ್ಲಿದ್ದರೂ ಕೇಂದ್ರ ಚುನಾವಣಾ ಆಯೋಗದ ಪಟ್ಟಿಯಲ್ಲಿ ಇಲ್ಲ ಎಂದು ಅವರು ತಿಳಿಸಿದ್ದಾರೆ.ಇದಲ್ಲದೆ, ಸರ್ಕಾರದ ಕಲ್ಯಾಣ ಯೋಜನೆಗಳ ಫಲಾನುಭವಿಗಳಾಗಿರುವ 55 ಲಕ್ಷ ಹಿಂದೂ ಮತದಾರರು ಹಾಗೂ 18ರಿಂದ 19 ವರ್ಷದೊಳಗಿನ 4.5 ಲಕ್ಷ ಮತದಾರರ ಹೆಸರುಗಳೂ ಮತದಾರರ ಪಟ್ಟಿಯಲ್ಲಿ ಇಲ್ಲ ಎಂದು ಯೋಗಿ ಆರೋಪಿಸಿದ್ದಾರೆ.

“ಮತದಾರರೆಂಬುದಕ್ಕೆ ಅಗತ್ಯ ದಾಖಲೆಗಳಿದ್ದರೂ ಮತದಾರರ ಪಟ್ಟಿಯಿಂದ ಹೊರಗುಳಿದಿರುವವರ ಹೆಸರುಗಳನ್ನು ಮರುಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿ ನಾವು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದೇವೆ,” ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!