ನ. 23ರಂದು ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರಿಗೆ ಸಾರ್ವಜನಿಕ ಸನ್ಮಾನ

ಮಂಗಳೂರು: ಕರ್ನಾಟಕ ವಿಧಾನ ಪರಿಷತ್‌ನ ಸಭಾಪತಿ ಸಲೀಂ ಅಹ್ಮದ್ ಅವರಿಗೆ ಸಾರ್ವಜನಿಕ ಸನ್ಮಾನ ಸಮಿತಿಯ ವತಿಯಿಂದ ನ. 23ರಂದು ಮಂಗಳೂರಿನಲ್ಲಿ ಸಾರ್ವಜನಿಕ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 11 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯುವ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ ಉದ್ಘಾಟಿಸಲಿದ್ದಾರೆ ಎಂದು ಅಭಿನಂದನಾ ಸಮಿತಿಯ ಅಧ್ಯಕ್ಷ ಟಿ.ಎಂ. ಶಾಹೀದ್ ತೆಕ್ಕಿಲ್ ತಿಳಿಸಿದರು.

ಮಂಗಳವಾರ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿಶ್ಚಲಾನಂದನಾಥ ಸ್ವಾಮೀಜಿ, ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಪಾಣಕ್ಕಾಡ್ ಸೈಯದ್ ನಾಸರ್ ಅಬ್ದುಲ್ ಹಯ್ ಶಿಹಾಬುದ್ದೀನ್ ತಂಗಲ್ ಅಲವಿ ಹಾಗೂ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಫಾ. ಫ್ರಾನ್ಸಿಸ್ ಝೇವಿಯರ್ ಗೋಮ್ಸ್ ಆಶೀರ್ವಚನ ನೀಡಲಿದ್ದಾರೆ ಎಂದರು.

ಮಾಜಿ ಸಚಿವರಾದ ಬಿ. ರಮಾನಾಥ ರೈ ಮತ್ತು ವಿನಯ ಕುಮಾರ್ ಸೊರಕೆ ಸನ್ಮಾನ ನೆರವೇರಿಸಲಿದ್ದು, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅಭಿನಂದನಾ ಭಾಷಣ ಮಾಡಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ವಿದ್ಯಾರ್ಥಿ ನಾಯಕರಾಗಿ ರಾಜಕೀಯ ಜೀವನ ಆರಂಭಿಸಿದ ಸಲೀಂ ಅಹ್ಮದ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಹಲವು ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಭಾರತೀಯ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸದಸ್ಯ, ತೆಲಂಗಾಣ ರಾಜ್ಯದ ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು, ವಿಧಾನ ಪರಿಷತ್‌ನ ಚುನಾಯಿತ ಸದಸ್ಯರಾಗಿ ಹಾಗೂ ಮುಖ್ಯ ಸಚೇತಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. 2026ರಲ್ಲಿ ಕರ್ನಾಟಕ ವಿಧಾನ ಪರಿಷತ್‌ನ ಸಭಾಪತಿಯಾಗಿ ಆಯ್ಕೆಯಾಗುವ ಮೂಲಕ ಮಹತ್ವದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

2017-18ರಲ್ಲಿ ಕರ್ನಾಟಕ ಸರಕಾರದ ದೆಹಲಿಯ ವಿಶೇಷ ಪ್ರತಿನಿಧಿಯಾಗಿ ಹಾಗೂ 2012ರಿಂದ 2014ರವರೆಗೆ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರದ ಮಹಾನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ, ವಿದೇಶಗಳಲ್ಲಿ ಭಾರತದ ಪ್ರತಿನಿಧಿಯಾಗಿ ಏಳು ಅಂತಾರಾಷ್ಟ್ರೀಯ ಯುವ, ರಾಜಕೀಯ, ಸಾಂಸ್ಕೃತಿಕ ಹಾಗೂ ಶಾಸಕಾಂಗ ನಿಯೋಗಗಳಲ್ಲಿ ಭಾಗವಹಿಸಿದ್ದಾರೆ ಎಂದು ಶಾಹೀದ್ ತೆಕ್ಕಿಲ್ ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಗೌರವಾಧ್ಯಕ್ಷ ಕಳ್ಳಿಗೆ ತಾರನಾಥ ಶೆಟ್ಟಿ, ಕಾರ್ಯದರ್ಶಿ ಟಿ.ಕೆ. ಸುಧೀರ್, ಕೋಶಾಧಿಕಾರಿ ಆಶ್ವಿನ್ ಕುಮಾರ್ ರೈ ಹಾಗೂ ಸದಸ್ಯರಾದ ಶಾಹುಲ್ ಹಮೀದ್ ಮತ್ತು ಕಿರಣ್ ಬುಡ್ಡೆಗುತ್ತು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!