ಪೆರ್ಲ:* ಉಕ್ಕಿನಡ್ಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಸರಗೋಡು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹೊರರೋಗಿ (ಒಪಿ) ವಿಭಾಗದ ಸೇವೆಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ತಾತ್ಕಾಲಿಕವಾಗಿ ಸ್ಥಳಾಂತರಿಸುವ ನಿರ್ಧಾರಕ್ಕೆ ತಡೆ ಬಿದ್ದಿದೆ.

ಎಂಬಿಬಿಎಸ್ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಕ್ಲಿನಿಕಲ್ ಪೋಸ್ಟಿಂಗ್‌ಗಳ ಹಿನ್ನೆಲೆಯಲ್ಲಿ ವೈದ್ಯಕೀಯ ಕಾಲೇಜಿನ ಒಪಿ ವಿಭಾಗದ ಸೇವೆಗಳನ್ನು ತಾತ್ಕಾಲಿಕವಾಗಿ ಜನರಲ್ ಆಸ್ಪತ್ರೆಗೆ ಸ್ಥಳಾಂತರಿಸಲು ನಿರ್ಧರಿಸಲಾಗಿತ್ತು. ಈ ಕುರಿತು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆ ಹೊರಡಿಸಿ, ರೋಗಿಗಳು ಹಾಗೂ ಸಾರ್ವಜನಿಕರು ಒಪಿ ಸೇವೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯನ್ನು ಸಂಪರ್ಕಿಸುವಂತೆ ಸೂಚಿಸಿದ್ದರು.
ಆದರೆ, ಆರೋಗ್ಯ ಇಲಾಖೆಯಿಂದ ಯಾವುದೇ ಅಧಿಕೃತ ಮಾಹಿತಿ ನೀಡದೆ ಸ್ಥಳೀಯ ಪ್ರಾಂಶುಪಾಲರು ಈ ರೀತಿಯ ಪ್ರಕಟಣೆ ಹೊರಡಿಸಿರುವುದಕ್ಕೆ ಸಾರ್ವಜನಿಕರು ಹಾಗೂ ಯೂತ್ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಒಪಿ ವಿಭಾಗದ ಸ್ಥಳಾಂತರದಿಂದ ರೋಗಿಗಳಿಗೆ ತೊಂದರೆಯಾಗುವ ಆತಂಕ ವ್ಯಕ್ತಪಡಿಸಿದ ಅವರು, ನಿರ್ಧಾರದ ವಿರುದ್ಧ ಹೋರಾಟ ನಡೆಸಿ ಸ್ಥಳಾಂತರ ಪ್ರಕ್ರಿಯೆಗೆ ತಡೆ ಒಡ್ಡಲು ಮುಂದಾಗಿದ್ದರು.

ಈ ನಡುವೆ ಬದಿಯಡ್ಕ ಮಂಡಲ ಕಾಂಗ್ರೆಸ್ ವತಿಯಿಂದ ಆರೋಗ್ಯ ಸಚಿವರು ಹಾಗೂ ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ವಿಷಯವನ್ನು ತರಲಾಗಿತ್ತು. ಇದರ ಪರಿಣಾಮವಾಗಿ ಒಪಿ ವಿಭಾಗದ ತಾತ್ಕಾಲಿಕ ಸ್ಥಳಾಂತರ ನಿರ್ಧಾರವನ್ನು ತಡೆಹಿಡಿಯಲಾಗಿದೆ ಎಂದು ಬದಿಯಡ್ಕ ಮಂಡಲ ಕಾಂಗ್ರೆಸ್ ಅಧ್ಯಕ್ಷ ಶ್ಯಾಮ್ ಪ್ರಸಾದ್ ಮಾನ್ಯ ತಿಳಿಸಿದ್ದಾರೆ.

