ನ. 23ರಂದು ಕದ್ರಿಯಲ್ಲಿ ‘ಮೋಹ ಮಾಧವಿ’ ಯಕ್ಷಗಾನ ಪ್ರಸಂಗ ಪರಾಮರ್ಶೆ

ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು ಆಶ್ರಯದಲ್ಲಿ ಅಖಿಲ ಭಾರತ ತುಳು ಒಕ್ಕೂಟದ ಸದಸ್ಯ ಸಂಸ್ಥೆ ಕದ್ರಿ ಯಕ್ಷ ಬಳಗ ಮಂಗಳೂರು ವತಿಯಿಂದ ನ. 23ರಂದು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ರಾಜಾಂಗಣದಲ್ಲಿ ನೂತನ ಪೌರಾಣಿಕ ಯಕ್ಷಗಾನ ಪ್ರಸಂಗ ‘ಮೋಹ ಮಾಧವಿ’ಯ ಪರಾಮರ್ಶೆ ಹಾಗೂ ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ.

ಸೋಮವಾರ ಅಪರಾಹ್ನ 3ರಿಂದ ಸಂಜೆ 5ರವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ 2026-27ನೇ ಸಾಲಿನ ಪಾವಂಜೆ ಮೇಳದ ತಿರುಗಾಟಕ್ಕಾಗಿ ಶ್ರೀ ಪವನ್ ಕಿರಣ್ ಕೆರೆ ವಿರಚಿತ ‘ಮೋಹ ಮಾಧವಿ’ ಪ್ರಸಂಗದ ಕುರಿತು ಪರಾಮರ್ಶೆ ನಡೆಯಲಿದೆ ಎಂದು ಕದ್ರಿ ಯಕ್ಷ ಬಳಗದ ಅಧ್ಯಕ್ಷ ಕದ್ರಿ ನವನೀತ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಯಕ್ಷಗಾನ ಅಕಾಡೆಮಿ ರಿಜಿಸ್ಟ್ರಾರ್ ನಮ್ರತಾ ಎನ್. ಹಾಗೂ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಭಾಗವತ ಪಟ್ಲ ಸತೀಶ್ ಶೆಟ್ಟಿ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಪ್ರಸಂಗದ ಪ್ರದರ್ಶನ ವಿಮರ್ಶೆಯಲ್ಲಿ ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಹಾಗೂ ಯಕ್ಷಗಾನ ವಿಮರ್ಶಕರಾದ ಮಹೇಂದ್ರ ಆಚಾರ್ಯ ಹೇರಂಜೆ, ಡಾ. ಹರೀಶ್ ಜೋಶಿ ವಿಟ್ಲ ಮತ್ತು ಶಶಿಧರ್ ತಲ್ಲೂರಂಗಡಿ ಭಾಗವಹಿಸಲಿದ್ದಾರೆ.

ಸಂಜೆ 6.30ರಿಂದ 7ರವರೆಗೆ ನಡೆಯುವ ಹಿರಿಯರ ಸಂಸ್ಮರಣೆ ಕಾರ್ಯಕ್ರಮದಲ್ಲಿ ಹಿರಿಯ ಅರ್ಥಧಾರಿ ದಿ. ಕದ್ರಿ ಕಂಬಳಗುತ್ತು ಬಾಲಕೃಷ್ಣ ಶೆಟ್ಟಿ ಅವರನ್ನು ಸ್ಮರಿಸಲಾಗುವುದು. ಡಾ. ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ಎ.ಜೆ. ಶೆಟ್ಟಿ ಹಾಗೂ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಪಾವಂಜೆ ಮೇಳದ ಹಾಸ್ಯಗಾರ ಹಾಗೂ ಯಕ್ಷಗಾನ ಕಲಾವಿದ ಸಂದೇಶ ಮಂದಾರ ಅವರಿಗೆ ಕದ್ರಿ ಯಕ್ಷ ಬಳಗದ ವತಿಯಿಂದ ‘ಕದ್ರಿ ಕಂಬಳಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು.

ರಾತ್ರಿ 7ರಿಂದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವ್ಯಜ ಕ್ಷೇತ್ರ ಪಾವಂಜೆ ಇವರಿಂದ ‘ಮೋಹ ಮಾಧವಿ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯ ಸಂಚಾಲಕ ಮೋಹನ್ ಕೊಪ್ಪಲ್ ಕದ್ರಿ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ, ಕೋಶಾಧಿಕಾರಿ ಶಿವಪ್ರಸಾದ ಪ್ರಭು ಹಾಗೂ ಉಪಾಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!