ಕನಿಷ್ಠ ವೇತನ ಜಾರಿಗೆ ಸರಕಾರದ ಪ್ರಯತ್ನ: ಟಿ.ಎಂ. ಶಾಹೀದ್ ತೆಕ್ಕಿಲ್

ಮಂಗಳೂರು: ರಾಜ್ಯ ಸರಕಾರ ಹೊರಡಿಸಿರುವ ಪರಿಷ್ಕೃತ ಕನಿಷ್ಠ ವೇತನ ಅಧಿಸೂಚನೆಯನ್ನು ವಿರೋಧಿಸಿ ಮಾಲಕರ ಸಂಘಟನೆಗಳು ಹೈಕೋರ್ಟ್ ಮೆಟ್ಟಿಲೇರಿವೆ. ಈ ವಿಚಾರವನ್ನು ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಎಂಟು ಸಚಿವರನ್ನೊಳಗೊಂಡ ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದೆ. ನ್ಯಾಯಾಲಯದ ಆದೇಶದಂತೆ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಶೀಘ್ರ ಕನಿಷ್ಠ ವೇತನ ಜಾರಿಗೆ ತರಲು ಸರಕಾರ ಪ್ರಯತ್ನಿಸುತ್ತಿದೆ ಎಂದು ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹೀದ್ ತೆಕ್ಕಿಲ್ ಹೇಳಿದರು.

ಶುಕ್ರವಾರ ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಮೇ 22ರಂದು ಹೊರಡಿಸಿದ ಪರಿಷ್ಕೃತ ಕನಿಷ್ಠ ವೇತನ ಅಧಿಸೂಚನೆಯ ಪ್ರಕಾರ ಕಾರ್ಮಿಕರ ವೇತನವನ್ನು ಸರಾಸರಿ ಶೇ. 60ರಷ್ಟು ಹೆಚ್ಚಿಸಲಾಗಿದೆ. ಆದರೆ, ಇದನ್ನು ವಿರೋಧಿಸಿ ಉದ್ಯೋಗದಾತರ ಸಂಘಟನೆಗಳು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿವೆ. ಅಧಿಸೂಚನೆಗೆ ನ್ಯಾಯಾಲಯ ಯಾವುದೇ ತಡೆಯಾಜ್ಞೆ ನೀಡಿಲ್ಲ. ಕೆಲವು ಸಂಸ್ಥೆಗಳು ವೇತನ ಹೆಚ್ಚಳ ಮಾಡಿದ ಬಳಿಕ ಮತ್ತೆ ಕಡಿತಗೊಳಿಸಿವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಸುಮಾರು 3.5 ಕೋಟಿ ಕಾರ್ಮಿಕರಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 2.5 ಲಕ್ಷ ಕಾರ್ಮಿಕರಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ರಾಜ್ಯದಲ್ಲಿ ಕನಿಷ್ಠ ವೇತನ ಪರಿಷ್ಕರಣೆ ಆಗಿರಲಿಲ್ಲ. ಇದೀಗ ಪರಿಷ್ಕೃತ ಕನಿಷ್ಠ ವೇತನ ಜಾರಿಯಾದರೆ ಬೆಲೆ ಏರಿಕೆಯಿಂದ ಸಂಕಷ್ಟ ಅನುಭವಿಸುತ್ತಿರುವ ಬಡ ಮತ್ತು ಮಧ್ಯಮ ವರ್ಗದ ಕಾರ್ಮಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಕಾರ್ಮಿಕರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ರಾಜ್ಯ ಸರಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಕಾರ್ಮಿಕ ನಿರೀಕ್ಷಕಿ ಮೇರಿ ಫೆಡ್ರಿಕ್ ಹಾಗೂ ಅಧ್ಯಕ್ಷರ ಆಪ್ತ ಸಹಾಯಕ ಗುಲಾಂ ಮುಸ್ತಫಾ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!