
ಮಂಗಳೂರು: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರಿಗೆ ನ.23ರಂದು ಮಂಗಳೂರಿನಲ್ಲಿ ಸಾರ್ವಜನಿಕ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.

ನ.23ರ ಸೋಮವಾರ ಪೂರ್ವಾಹ್ನ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಅಲ್ಪಸಂಖ್ಯಾತ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರಾದ ಯು.ಟಿ. ಖಾದರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಕರ್ನಾಟಕ ಸರ್ಕಾರದ ಸಚಿವ ದರ್ಜೆಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸಭಾಪತಿ ಸಲೀಂ ಅಹ್ಮದ್ ಸಾರ್ವಜನಿಕ ಸನ್ಮಾನ ಸಮಿತಿಯ ಅಧ್ಯಕ್ಷ ಟಿ.ಎಂ. ಶಾಹೀದ್ ತೆಕ್ಕಿಲ್ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ.
ಸನ್ಮಾನ ಕಾರ್ಯಕ್ರಮದಲ್ಲಿ ಗಣ್ಯರು, ರಾಜಕೀಯ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.


