ದಾಮೋದರ ಸುವರ್ಣ ಜನ್ಮಜಯಂತಿ: ನ.29ರಂದು ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ

ಮಂಗಳೂರು: ದಾಮೋದರ ಸುವರ್ಣ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ದಿವಂಗತ ದಾಮೋದರ ಆರ್. ಸುವರ್ಣ ಅವರ 102ನೇ ಜನ್ಮಜಯಂತಿ ಪ್ರಯುಕ್ತ ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನ.29ರಂದು ಬೆಳಗ್ಗೆ 10 ಗಂಟೆಗೆ ಕುದ್ರೋಳಿಯ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ನಗರದ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಮಾತನಾಡಿ, ಸಮಾರಂಭದಲ್ಲಿ ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ಆರ್ಥಿಕವಾಗಿ ಹಿಂದುಳಿದ ಸಮಾಜದ ವಿದ್ಯಾರ್ಥಿಗಳಿಗೆ 80 ಲಕ್ಷ ರೂ.ಗೂ ಅಧಿಕ ಮೊತ್ತದ ವಿದ್ಯಾರ್ಥಿವೇತನ ವಿತರಿಸಲಾಗುವುದು. ಅಲ್ಲದೆ, ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು. ಬೆಳಗ್ಗೆ 9 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಲಿವೆ ಎಂದು ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಸದ ಡಾ. ಸಿ.ಎನ್. ಮಂಜುನಾಥ್ ವಿದ್ಯಾರ್ಥಿವೇತನ ವಿತರಣೆಗೆ ಚಾಲನೆ ನೀಡಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮತ್ತು ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವಿ. ಸುನೀಲ್ ಕುಮಾರ್, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ದಿವಂಗತ ದಾಮೋದರ ಆರ್. ಸುವರ್ಣ ಅವರು ಅಸಾಧಾರಣ ವ್ಯಕ್ತಿತ್ವದ ಸಮಾಜಸೇವಕರಾಗಿದ್ದರು. ಇಂದು ಸರ್ಕಾರಗಳು ಜಾರಿಗೆ ತರುತ್ತಿರುವ ಹಲವು ಜನಪರ ಯೋಜನೆಗಳನ್ನು ಅವರು ಅಂದಿನ ಕಾಲದಲ್ಲೇ ತಮ್ಮ ಕಾರ್ಯವೈಖರಿಯ ಮೂಲಕ ಅನುಷ್ಠಾನಗೊಳಿಸಿದ್ದರು. 1980ರಲ್ಲಿ ಎರಡು ವ್ಯಾನ್‌ಗಳ ಮೂಲಕ ಸಂಚಾರಿ ಕ್ಲಿನಿಕ್ ಆರಂಭಿಸಿ, ವೈದ್ಯರ ತಂಡದೊಂದಿಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಬಡಜನರಿಗೆ ಉಚಿತ ಆರೋಗ್ಯ ಸೇವೆ ಒದಗಿಸಿದ್ದರು. ಬಡ ಹೆಣ್ಣುಮಕ್ಕಳ ಬಾಳಿಗೆ ಹೊಸ ಬೆಳಕು ನೀಡುವ ಉದ್ದೇಶದಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಾಮೂಹಿಕ ವಿವಾಹ ಆಯೋಜಿಸುವುದರ ಜತೆಗೆ, ದೀನದಲಿತರ ಸೇವೆಗೂ ವಿಶೇಷ ಅನುದಾನ ಒದಗಿಸಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು ಎಂದು ನವೀನ್ ಚಂದ್ರ ಸುವರ್ಣ ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಉದಯಚಂದ್ರ ಡಿ. ಸುವರ್ಣ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!