ಮಂಗಳೂರು: ಬೆಳಗಾವಿಯಲ್ಲಿ ಡಿಸೆಂಬರ್ 2ರಿಂದ 11ರವರೆಗೆ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿಶೇಷ ಚೇತನರು, ಭಿನ್ನ ಸಾಮರ್ಥ್ಯದ ಮಕ್ಕಳು ಹಾಗೂ ವಿಶೇಷ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಹೆಚ್ಚಿನ ಚರ್ಚೆಗೆ ಅವಕಾಶ ಕಲ್ಪಿಸಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಿನ್ನ ಸಾಮರ್ಥ್ಯದ ಮಕ್ಕಳು ಹಾಗೂ ವಿಶೇಷ ಶಾಲೆಗಳನ್ನು ನಡೆಸುತ್ತಿರುವ ಆಡಳಿತ ಮಂಡಳಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ. ಈ ಕುರಿತು ಶಕ್ತಿನಗರದ ಸಾನಿಧ್ಯ ಭಿನ್ನ ಸಾಮರ್ಥ್ಯದ ಮಕ್ಕಳ ವಸತಿ ಶಾಲೆಯ ಆಡಳಿತಾಧಿಕಾರಿಗಳು ತಮ್ಮ ಗಮನ ಸೆಳೆದಿದ್ದಾರೆ. ಈ ಸಮಸ್ಯೆಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಿ ಚರ್ಚೆಗೆ ಆದ್ಯತೆ ನೀಡಲಾಗುವುದು ಎಂದರು.

ಸುದ್ದಿಗೋಷ್ಠಿಗೂ ಮುನ್ನ ಸಭಾಪತಿ ಸಲೀಂ ಅಹ್ಮದ್ ಅವರು ಶಕ್ತಿನಗರದಲ್ಲಿರುವ ಸಾನಿಧ್ಯ ಶಾಲೆಗೆ ಭೇಟಿ ನೀಡಿ, ಶಾಲೆಯ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಶಾಲೆಯ ಆಡಳಿತಾಧಿಕಾರಿ ಡಾ. ವಸಂತ ಕುಮಾರ್ ಶೆಟ್ಟಿ ಅವರು ವಿಶೇಷ ಚೇತನ ಮಕ್ಕಳು, ವಿಶೇಷ ಶಾಲೆಗಳ ಶಿಕ್ಷಕರು ಹಾಗೂ ಆಡಳಿತ ಮಂಡಳಿಯವರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಸಭಾಪತಿಗಳ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹಾಗೂ ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ (ಸಚಿವ ಸ್ಥಾನಮಾನ) ಟಿ.ಎಂ. ಶಾಹಿದ್ ತೆಕ್ಕಿಲ್ ಉಪಸ್ಥಿತರಿದ್ದರು.

