52 ಎಸೆತಗಳಲ್ಲಿ ದ್ವಿಶತಕ ಸಿಡಿಸಿ ವಿಶ್ವದಾಖಲೆ ಬರೆದ ವೈಭವ್ ಸೂರ್ಯವಂಶಿ: 28 ಎಸೆತಗಳಲ್ಲಿ ಶತಕ, 14.2 ಓವರ್‌ಗಳಲ್ಲೇ ಭಾರತಕ್ಕೆ ಜಯ!

ದುಬೈ: ಬೌಲರ್ ಯಾರೇ ಆಗಿರಲಿ, ಬ್ಯಾಟಿಂಗ್ ಅಬ್ಬರದಲ್ಲಿ ಯಾವುದೇ ಕಡಿಮೆಯಿಲ್ಲ ಎಂಬುದನ್ನು ಭಾರತದ ಯುವ ಬ್ಯಾಟಿಂಗ್ ಪ್ರತಿಭೆ ವೈಭವ್ ಸೂರ್ಯವಂಶಿ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ರೈಸಿಂಗ್ ಸ್ಟಾರ್ಸ್ ಏಷ್ಯಾ ಕಪ್ ಪಂದ್ಯದಲ್ಲಿ ಯುಎಇ ವಿರುದ್ಧ ಭಾರತ ಎ ತಂಡದ ಪರ ಕೇವಲ 52 ಎಸೆತಗಳಲ್ಲಿ ದ್ವಿಶತಕ ಸಿಡಿಸಿ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದಾರೆ. ಈ ಮೂಲಕ ಲಿಸ್ಟ್ ಎ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗದ ದ್ವಿಶತಕ ದಾಖಲಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಪಂದ್ಯದಲ್ಲಿ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ 15 ವರ್ಷದ ವೈಭವ್ ಆರಂಭದಿಂದಲೇ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು, 28 ಎಸೆತಗಳಲ್ಲಿ ಶತಕ ಸಿಡಿಸಿ ಮತ್ತೊಂದು ದಾಖಲೆ ನಿರ್ಮಿಸಿದರು. ಈ ಮೂಲಕ 2023ರಲ್ಲಿ 29 ಎಸೆತಗಳಲ್ಲಿ ಶತಕ ಬಾರಿಸಿದ್ದ ಆಸ್ಟ್ರೇಲಿಯಾದ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಅವರ ದಾಖಲೆಯನ್ನು ಹಿಂದಿಕ್ಕಿದರು.

ಅಲ್ಲದೆ, ಸಕಿಬುಲ್ ಗನಿ (32 ಎಸೆತ) ಮತ್ತು ಇಶಾನ್ ಕಿಶನ್ (33 ಎಸೆತ) ಅವರ ದಾಖಲೆಗಳನ್ನು ಹಿಂದಿಕ್ಕಿ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಅತ್ಯಂತ ವೇಗದ ಶತಕ ದಾಖಲಿಸಿದ ಭಾರತೀಯ ಆಟಗಾರ ಎನಿಸಿಕೊಂಡರು.ಇಷ್ಟಕ್ಕೇ ನಿಲ್ಲದ ವೈಭವ್, ಕೇವಲ 40 ಎಸೆತಗಳಲ್ಲಿ 150 ರನ್ ಪೂರೈಸಿ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಅತ್ಯಂತ ವೇಗವಾಗಿ 150 ರನ್ ಗಳಿಸಿದ ಆಟಗಾರ ಎಂಬ ದಾಖಲೆಯನ್ನೂ ತಮ್ಮದಾಗಿಸಿಕೊಂಡರು.

ಅಂತಿಮವಾಗಿ 53 ಎಸೆತಗಳಲ್ಲಿ 204 ರನ್ ಗಳಿಸಿ ವೈಭವ್ ಔಟಾದರು. ಅವರ ಸ್ಫೋಟಕ ಇನ್ನಿಂಗ್ಸ್‌ನಲ್ಲಿ 28 ಸಿಕ್ಸರ್ ಹಾಗೂ 7 ಬೌಂಡರಿಗಳು ಸೇರಿದ್ದವು. ಈ ಮೂಲಕ ಲಿಸ್ಟ್ ಎ ಕ್ರಿಕೆಟ್‌ನ ಒಂದೇ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಭಾರತೀಯ ಆಟಗಾರ ಎಂಬ ದಾಖಲೆಯನ್ನೂ ನಿರ್ಮಿಸಿದರು. ಈ ಸಾಧನೆಯೊಂದಿಗೆ ರೋಹಿತ್ ಶರ್ಮಾ ಮತ್ತು ಋತುರಾಜ್ ಗಾಯಕ್ವಾಡ್ ಅವರ ದಾಖಲೆಗಳನ್ನು ಹಿಂದಿಕ್ಕಿದರು.

ವೈಭವ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಯುಎಇ ನೀಡಿದ್ದ 250 ರನ್‌ಗಳ ಗೆಲುವಿನ ಗುರಿಯನ್ನು ಭಾರತ ಎ ತಂಡ ಸುಲಭವಾಗಿ ಬೆನ್ನಟ್ಟಿತು. ಕೇವಲ 14.2 ಓವರ್‌ಗಳಲ್ಲೇ ಗುರಿ ತಲುಪಿ ಭರ್ಜರಿ ಜಯ ದಾಖಲಿಸಿತು.15ರ ಹರೆಯದಲ್ಲೇ ದಾಖಲೆಗಳ ಮೇಲೆ ದಾಖಲೆ ನಿರ್ಮಿಸುತ್ತಿರುವ ವೈಭವ್ ಸೂರ್ಯವಂಶಿ ಅವರ ಈ ಪ್ರದರ್ಶನ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!