ಬಿಸಿ ರೋಡ್ : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದಾಗಿ ದೇಶಾದ್ಯಂತ ಕೋಟ್ಯಂತರ ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಡಲ್ಪಟ್ಟಿದ್ದು, ಅನೇಕ ಅರ್ಹ ಮತದಾರರು ತಮ್ಮ ಪ್ರಜಾಸತ್ತಾತ್ಮಕ ಮತದಾನದ ಹಕ್ಕಿನಿಂದ ವಂಚಿತರಾಗುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ SIR ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಹಾಗೂ ಈ ಪ್ರಕ್ರಿಯೆಗೆ ಸಂಬಂಧಿಸಿದ ಗೊಂದಲಗಳಿಗೆ ಹೊಣೆಗಾರರಾಗಿರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಯಂಗ್ ಡೆಮಾಕ್ರಟ್ಸ್ ಮಂಗಳೂರು ಗ್ರಾಮಾಂತರ ಜಿಲ್ಲಾ ಆರ್ಗನೈಸಿಂಗ್ ಸಮಿತಿಯ ವತಿಯಿಂದ ನವೆಂಬರ್ 27ರ ಶುಕ್ರವಾರ ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾಗಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಖಾತರಿಪಡಿಸಬೇಕು, ಮತದಾರರ ಪಟ್ಟಿಯಿಂದ ಅನ್ಯಾಯವಾಗಿ ಹೊರಗುಳಿದವರ ಹಕ್ಕುಗಳನ್ನು ರಕ್ಷಿಸಬೇಕು ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಬೇಕು ಎಂಬ ಉದ್ದೇಶದಿಂದ ‘UNMUTE JANTAR MANTAR – ಮೌನ ಮುರಿಯಿರಿ’ ಎಂಬ ಘೋಷವಾಕ್ಯದೊಂದಿಗೆ ಈ ಧರಣಿ ನಡೆಯಲಿದೆ ಎಂದು ಯಂಗ್ ಡೆಮಾಕ್ರಟ್ಸ್ ಮಂಗಳೂರು ಗ್ರಾಮಾಂತರ ಜಿಲ್ಲಾ ಆರ್ಗನೈಸಿಂಗ್ ಕಮಿಟಿ ಜಾಯಿಂಟ್ ಕನ್ವೀನರ್ ತೌಸಿಫ್ ಕಕ್ಕಿಂಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

