ಯುವಜನಾಂಗದಲ್ಲಿ ಮತ್ತು ಮಕ್ಕಳಲ್ಲಿ ಕನ್ನಡ ಕಲಿಕೆಯ ಬಗ್ಗೆ ಪ್ರೀತಿಯನ್ನು ಪಾಲಕರು ಬೆಳೆಸಿದರೆ ಮಾತ್ರ ಕನ್ನಡದ ಉಳಿವು ಸಾಧ್ಯ : ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್

ಮಂಗಳೂರು:ಕನ್ನಡ ಭಾಷೆ ಸಮೃದ್ಧವಾಗಿದೆ ಎಂದು ನಾವು ಕೈಕಟ್ಟಿ ಕುಳಿತುಕೊಳ್ಳಬಾರದು. ಆಧುನಿಕ ಶಿಕ್ಷಣ ಕ್ರಮದಿಂದ ಕನ್ನಡ ಕಲಿಕೆಯ ಬಗ್ಗೆ ಯುವಜನಾಂಗದಲ್ಲಿ ಮತ್ತು ಮಕ್ಕಳಲ್ಲಿ ಇನ್ನಷ್ಟು ಪ್ರೀತಿ ಮತ್ತು ಕಾಳಜಿ ಮೂಡುವಂತೆ ಪಾಲಕರು ಗಮನಹರಿಸಬೇಕು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು .

ಅವರು ನಗರದ ನೆಹರೂ ಮೈದಾನದಲ್ಲಿ ಶನಿವಾರ ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಿ ಮಾತನಾಡಿ ,ನಾವು ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ಬಲಿ ಕೊಟ್ಟು ಉದಾರಿಗಳಾಗಬಾರದು. ಭಾಷೆಯ ವ್ಯಾಮೋಹವೂ ಅತಿಯಾಗಿರಬಾರದು, ಆದರೆ ಕನ್ನಡ ಅಭಿಮಾನ ಇರಲೇ ಬೇಕು, ಅಭಿಮಾನವಿದ್ದರೆ ಮಾತ್ರ ಕನ್ನಡ ಉಳಿಸಲು ಬೆಳೆಸಲು ಸಾಧ್ಯ ಕನ್ನಡ ಭಾಷೆ ತಿಳಿಯದವರಿಗೆ ಕನ್ನಡ ಕಲಿಸುವ ಕೆಲಸವಾಗಬೇಕು ಎಂದು ಹೇಳಿದರು.

ನಗರ ವ್ಯಾಪ್ತಿಯಲ್ಲಿ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ತಲಪಾಡಿ ಯಿಂದ ಸುರತ್ಕಲ್ ವರೆಗೆ ರಿಂಗ್ ರೋಡ್ ನಿರ್ಮಿಸಲು ಸರಕಾರ ಯೋಜನೆ ರೂಪಿಸಲಿದೆ ಎಂದರು .

ಪಣಂಬೂರು ಮತ್ತು ತಣ್ಣೀರುಬಾವಿ ಕಡಲ ತೀರಗಳ ಅಭಿವೃದ್ಧಿ ಮತ್ತು ನಿರ್ವಹಣೆಗಾಗಿ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ಜಾರಿಗೊಳಿಸಲು ಕಾರ್ಯಾದೇಶ ನೀಡಲಾಗಿರುತ್ತದೆ. ವಿವಿಧ ಪ್ರವಾಸಿ ಕಾರ್ಯಕ್ರಮಗಳಿಗೆ ಅನುದಾನ ನೀಡುವ ಮೂಲಕ ಜಿಲ್ಲೆಗೆ ಪ್ರವಾಸಿಗರನ್ನು ಆಕರ್ಷಿಸಲು ಒತ್ತು ನೀಡಲಾಗುತ್ತಿದೆ.ಮಂಗಳೂರಿನಲ್ಲಿ ಬಹುನಿರೀಕ್ಷಿತ ರಂಗಮಂದಿರ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ. ಆ ಮೂಲಕ ಜಿಲ್ಲೆಯ ಸಾಹಿತ್ಯ ರಂಗಾಸಕ್ತರ ದೀರ್ಘಕಾಲದ ಬೇಡಿಕೆಗೆ ಸರಕಾರ ಸ್ಪಂದಿಸಿದೆ ಎಂದು ಅವರು ಹೇಳಿದರು.

ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರು, ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡ 95 ಮಂದಿ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ , ವಿಧಾನ ಸಭಾ ಶಾಸಕರಾದ ವೇದವ್ಯಾಸ ಕಾಮತ್ , ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ , ಮಂಜುನಾಥ್ ಭಂಡಾರಿ , ಜಿಲ್ಲಾಧಿಕಾರಿಗಳಾದ ದರ್ಶನ್ ಹೆಚ್ ವಿ , ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಸಹಿತ ಮುಂತಾದ ಪ್ರಮುಖ ಗಣ್ಯರು ಉಪಸ್ಥಿತತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!