ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣ ಹಾಗೂ ಕೈಗಾರಿಕಾ ಕ್ರಾಂತಿಯ ಮೂಲಕ ಹೆಸರು ಗಳಿಸಿದ್ದ ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್ ವಿನಯ್ ಹೆಗ್ಡೆ ಅವರು ಜನವರಿ 1ರಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪತ್ನಿ, ಪುತ್ರ, ಪುತ್ರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಅವರ ಪಾರ್ಥಿವ ಶರೀರವನ್ನು ಜನವರಿ 1ರ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 3.00 ರವರೆಗೆ ಮಂಗಳೂರಿನ ಶಿವಭಾಗ್ನಲ್ಲಿರುವ ಸದಾನಂದ ನಿವಾಸದಲ್ಲಿ ಮತ್ತು ಸಂಜೆ 4.30 ರಿಂದ ಸಂಜೆ 6.00 ರವರೆಗೆ ನಿಟ್ಟೆ ಕ್ಯಾಂಪಸ್ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ.ಶಿಕ್ಷಣ ತಜ್ಞ, ಉದ್ಯಮಿ, ಸಮಾಜ ಸೇವಕರಾಗಿದ್ದ ವಿನಯ್ ಹೆಗ್ಡೆ ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಗಮನಾರ್ಹ ಪಾತ್ರ ವಹಿಸಿದ್ದರು.
ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಅವರು ರಾಜ್ಯೋತ್ಸವ ಪ್ರಶಸ್ತಿ, ಗೌರವ ಡಾಕ್ಟರೇಟ್ ಸಹಿತ ಹಲವು ಗೌರವಗಳಿಗೆ ಪಾತ್ರರಾಗಿದ್ದರು.ಲೋಕಸಭಾ ಸ್ಪೀಕರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರರಾಗಿದ್ದ ವಿನಯ್ ಹೆಗ್ಡೆ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಶಿಕ್ಷಣ ಪೂರೈಸಿದ್ದರು.
ತಂದೆಯ ಆಶಯದಂತೆ 1979ರಲ್ಲಿ ‘ನಿಟ್ಟೆ ಎಜುಕೇಶನ್ ಟ್ರಸ್ಟ್’ ಸ್ಥಾಪಿಸಿದರು. ಬಳಿಕ ಈ ಶಿಕ್ಷಣ ಸಂಸ್ಥೆಗಳು ಮಂಗಳೂರು, ಬೆಂಗಳೂರು ಮತ್ತು ನಿಟ್ಟೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳನ್ನು ಹೊಂದುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದರಲ್ಲಿ ವೈದ್ಯಕೀಯ, ಇಂಜಿನಿಯರಿಂಗ್, ದಂತ ವೈದ್ಯಕೀಯ, ಫಾರ್ಮಸಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜುಗಳು ಸೇರಿವೆ.
ಮಂಗಳೂರಿನ ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿಯಾದ ಅವರು ಲೆಮಿನಾ ಸಸ್ಪೆನ್ಸನ್ ಪ್ರೈವೇಟ್ ಲಿಮಿಟೆಡ್, ಸೇರಿದಂತೆ ಲೆಮಿನಾ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಇದು ಆಟೋಮೊಬೈಲ್ ಭಾಗಗಳ ತಯಾರಿಕೆಯಲ್ಲಿ ಪ್ರಮುಖ ಸಂಸ್ಥೆಯಾಗಿದೆ.ವಿನಯ್ ಹೆಗ್ಡೆ ಅವರು ಕರ್ನಾಟಕದ ಮಾಜಿ ಲೋಕಾಯುಕ್ತ, ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಸಂತೋಷ್ ಹೆಗ್ಡೆ ಅವರ ಸಹೋದರ ಕೂಡ ಆಗಿದ್ದಾರೆ.