ಕುವೈತ್ ಸಿಟಿ, ಜೂನ್ 4: ಇರಾನ್ ಮತ್ತು ಅಮೆರಿಕ ನಡುವಿನ ಮಿಲಿಟರಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆಯೇ, ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇಂದು ಇರಾನ್ ಡ್ರೋನ್ ದಾಳಿ ನಡೆಸಿದೆ. ದಾಳಿಯಲ್ಲಿ ಭಾರತೀಯ ನಾಗರಿಕನೊಬ್ಬ ಮೃತಪಟ್ಟಿರುವುದಾಗಿ ಕುವೈತ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಣೆ ನೀಡಿರುವ ರಾಯಭಾರ ಕಚೇರಿ, ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ದಾಳಿಯಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವುದನ್ನು ದೃಢಪಡಿಸಿದೆ. ಮೃತರ ಕುಟುಂಬದೊಂದಿಗೆ ಸಂಪರ್ಕ ಸಾಧಿಸಲಾಗಿದ್ದು, ಅಗತ್ಯ ನೆರವು ಒದಗಿಸಲಾಗುತ್ತಿದೆ ಎಂದು ತಿಳಿಸಿದೆ.
ಮಾಹಿತಿಯ ಪ್ರಕಾರ, ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್–1 ಪ್ರಯಾಣಿಕರ ಕಟ್ಟಡವನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಲಾಗಿದೆ. ಘಟನೆಯ ಬಳಿಕ ಕುವೈತ್ ನಾಗರಿಕ ವಿಮಾನಯಾನ ಪ್ರಾಧಿಕಾರ ದೇಶದ ವಾಯುಪ್ರದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಾತ್ಕಾಲಿಕವಾಗಿ ಮುಚ್ಚಿದೆ.
ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ವಾಯು ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು, ಕುವೈತ್ಗೆ ಆಗಮಿಸುತ್ತಿದ್ದ ಹಾಗೂ ಅಲ್ಲಿಂದ ಹೊರಡುತ್ತಿದ್ದ ವಿಮಾನಗಳನ್ನು ಪರ್ಯಾಯ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದರ ಬೆನ್ನಲ್ಲೇ ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋ, ಜೂನ್ 4ರಂದು ಮಧ್ಯಾಹ್ನ 12 ಗಂಟೆಯವರೆಗೆ ಕುವೈತ್ಗೆ ತೆರಳುವ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ಪ್ರಕಟಿಸಿದೆ.
ಮಧ್ಯಪ್ರಾಚ್ಯ ಪ್ರದೇಶದಲ್ಲಿ ಹೆಚ್ಚುತ್ತಿರುವ ಭದ್ರತಾ ಆತಂಕದ ಹಿನ್ನೆಲೆಯಲ್ಲಿ ಹಲವು ರಾಷ್ಟ್ರಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂದಿನ ಬೆಳವಣಿಗೆಗಳ ಬಗ್ಗೆ ಎಚ್ಚರಿಕೆ ವಹಿಸಿವೆ.