ಚಿಪೆವಾ ಫಾಲ್ಸ್: ಹಾರ್ಮುಜ್ ಜಲಸಂಧಿಯತ್ತ ಸಾಗುತ್ತಿದ್ದ ನಾಲ್ಕು ಇರಾನ್ ಡ್ರೋನ್‌ಗಳನ್ನು ಅಮೆರಿಕ ಸೇನೆ ಹೊಡೆದುರುಳಿಸಿದ್ದು, ಇರಾನ್‌ನ ಹಲವು ರಾಡಾರ್ ಕೇಂದ್ರಗಳ ಮೇಲೂ ವೈಮಾನಿಕ ದಾಳಿ ನಡೆಸಿದೆ. ಈ ಬೆಳವಣಿಗೆಯಿಂದ ಮಧ್ಯಪ್ರಾಚ್ಯದಲ್ಲಿ ಮತ್ತೊಮ್ಮೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಕದನ ವಿರಾಮದ ಪ್ರಯತ್ನಗಳಿಗೆ ಹೊಸ ಸವಾಲು ಎದುರಾಗಿದೆ.
ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಇರಾನ್‌ನಿಂದ ಉಡಾಯಿಸಲಾದ ಡ್ರೋನ್‌ಗಳು ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಹಡಗುಗಳು ಹಾಗೂ ಅಂತರರಾಷ್ಟ್ರೀಯ ಸಾಗರ ಸಂಚಾರಕ್ಕೆ ತಕ್ಷಣದ ಭದ್ರತಾ ಅಪಾಯವನ್ನು ಉಂಟುಮಾಡಿದ್ದವು. ಈ ಹಿನ್ನೆಲೆಯಲ್ಲಿ ಅವುಗಳನ್ನು ಗುರಿಯಾಗಿಸಿ ಯಶಸ್ವಿಯಾಗಿ ಹೊಡೆದುರುಳಿಸಲಾಗಿದೆ ಎಂದು ತಿಳಿಸಲಾಗಿದೆ.



ಇದರ ಜೊತೆಗೆ, ಡ್ರೋನ್ ಕಾರ್ಯಾಚರಣೆಗೆ ಬೆಂಬಲ ನೀಡುತ್ತಿದ್ದರೆಂದು ಶಂಕಿಸಲಾದ ಕೆಲವು ರಾಡಾರ್ ಕೇಂದ್ರಗಳ ಮೇಲೂ ಅಮೆರಿಕ ವೈಮಾನಿಕ ದಾಳಿ ನಡೆಸಿದೆ. ದಾಳಿಯಿಂದ ಉಂಟಾದ ಹಾನಿಯ ಕುರಿತು ಹೆಚ್ಚಿನ ವಿವರಗಳು ಇನ್ನೂ ಬಹಿರಂಗವಾಗಿಲ್ಲ.
ಜಾಗತಿಕ ತೈಲ ಮತ್ತು ನೈಸರ್ಗಿಕ ಅನಿಲ ಸಾಗಣೆಗೆ ಅತ್ಯಂತ ಮಹತ್ವದ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿ ವಿಶ್ವದ ಇಂಧನ ಪೂರೈಕೆ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಿಶ್ವದ ಬಹುಪಾಲು ತೈಲ ರಫ್ತು ಇದೇ ಮಾರ್ಗದ ಮೂಲಕ ಸಾಗುತ್ತದೆ.
ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದಲ್ಲಿ ತನ್ನ ಪ್ರಭಾವವನ್ನು ವಿಸ್ತರಿಸಲು ಇರಾನ್ ಪ್ರಯತ್ನಿಸುತ್ತಿದೆ ಎಂದು ಅಮೆರಿಕ ಆರೋಪಿಸಿದೆ. ಈ ಬೆಳವಣಿಗೆಗಳ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲೂ ಪ್ರತಿಫಲಿಸಿದ್ದು, ತೈಲ ಬೆಲೆಗಳಲ್ಲಿ ಏರಿಕೆ ಕಂಡುಬಂದಿದೆ.
ಇರಾನ್‌ನ ಬಂದರುಗಳ ವಿರುದ್ಧ ಅಮೆರಿಕ ಈಗಾಗಲೇ ಹಲವು ನಿರ್ಬಂಧಗಳನ್ನು ಜಾರಿಗೊಳಿಸಿರುವ ಹಿನ್ನೆಲೆ, ಉಭಯ ರಾಷ್ಟ್ರಗಳ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಮಧ್ಯಪ್ರಾಚ್ಯದಲ್ಲಿ ಭದ್ರತಾ ಪರಿಸ್ಥಿತಿ ಮತ್ತೆ ಅಸ್ಥಿರಗೊಳ್ಳುವ ಆತಂಕವೂ ವ್ಯಕ್ತವಾಗುತ್ತಿದೆ.

