ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಶುಕ್ರವಾರ ಸುದ್ದಿಸಂಸ್ಥೆ ಯುಎನ್ಐ (ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ) ಕಚೇರಿಯನ್ನು ಪೊಲೀಸರು ಸೀಲ್ ಮಾಡಿದ್ದು, ಸಿಬ್ಬಂದಿಯನ್ನು ಹೊರಹಾಕಿದ ಘಟನೆ ನಡೆದಿದೆ.
ಪೊಲೀಸರ ಈ ಕ್ರಮವನ್ನು ಸುದ್ದಿಸಂಸ್ಥೆ ಖಂಡಿಸಿದ್ದು, ಇದನ್ನು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿಯೆಂದು ಆರೋಪಿಸಿದೆ. ವಿಶೇಷವಾಗಿ ಮಹಿಳಾ ಸಿಬ್ಬಂದಿಯನ್ನು ಪೊಲೀಸರು ಅಮಾನುಷವಾಗಿ ನಡೆಸಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಪೊಲೀಸ್ ಉಪ ಆಯುಕ್ತ ಸಚಿನ್ ಶರ್ಮಾ, ಹೈಕೋರ್ಟ್ ಆದೇಶದಂತೆ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಸಂಪೂರ್ಣ ಕಾರ್ಯಾಚರಣೆಯನ್ನು ವೀಡಿಯೊಗ್ರಫಿ ಮಾಡಲಾಗಿದ್ದು, ಯಾವುದೇ ರೀತಿಯ ತಪ್ಪು ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಭೂ ಮಂಜೂರಾತಿ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಯುಎನ್ಐ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ನಂತರ ಈ ಜಪ್ತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಈ ಘಟನೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದ್ದು, ಪತ್ರಿಕಾ ಸ್ವಾತಂತ್ರ್ಯದ ಕುರಿತು ಹೊಸ ಚರ್ಚೆಗಳಿಗೆ ದಾರಿ ಮಾಡಿಕೊಟ್ಟಿದೆ.