ಕೋಲ್ಕತ್ತಾ, ಮೇ 7: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರ ತೀವ್ರಗೊಂಡಿದ್ದು, ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಐವರು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ತಡರಾತ್ರಿ ಈ ಘಟನೆ ನಡೆದಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಕೆಲವೇ ಗಂಟೆಗಳ ಬಳಿಕ ಈ ದಾಳಿ ಸಂಭವಿಸಿದೆ.
ಮೋಟಾರ್ ಸೈಕಲ್ನಲ್ಲಿ ಬಂದ ದುಷ್ಕರ್ಮಿಗಳು ಸೇಂಟ್ ಕ್ಸೇವಿಯರ್ ಸಂಸ್ಥೆ ಸಮೀಪ ಬಿಜೆಪಿ ಕಾರ್ಯಕರ್ತರ ಗುಂಪಿನ ಮೇಲೆ ಕಚ್ಚಾ ಬಾಂಬ್ ಎಸೆದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡ ಐವರನ್ನು ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳೀಯ ಮೂಲಗಳ ಪ್ರಕಾರ, ವಾರ್ಡ್ ಸಂಖ್ಯೆ 2ರ ದತ್ತಾ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಸ್ಥಳೀಯ ನಿವಾಸಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದ ವೇಳೆ ದಾಳಿ ನಡೆದಿದೆ.
ಈ ದಾಳಿಯ ಹಿಂದೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಬೆಂಬಲವಿದೆ ಎಂದು ಬಿಜೆಪಿ ಆರೋಪಿಸಿದೆ. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷ ಆರೋಪಗಳನ್ನು ತಳ್ಳಿಹಾಕಿದೆ.
“ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಆರೋಪಿಗಳನ್ನು ಬಂಧಿಸಲು ಕಾರ್ಯಾಚರಣೆ ಮುಂದುವರಿದಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯ ಬಳಿಕ ಪ್ರದೇಶದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ.
ಗಮನಾರ್ಹವಾಗಿ, ಈ ಸ್ಫೋಟವು ಆರ್ಜಿ ಕಾರ್ ಆಸ್ಪತ್ರೆ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಾಯಿ ಹಾಗೂ ಹೊಸದಾಗಿ ಆಯ್ಕೆಯಾದ ಬಿಜೆಪಿ ಶಾಸಕಿ ರತ್ನಾ ದೇಬ್ನಾಥ್ ಅವರ ನಿವಾಸದ ಸಮೀಪವೇ ಸಂಭವಿಸಿದೆ ಎಂದು ತಿಳಿದುಬಂದಿದೆ.