ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚೊಚ್ಚಲ ಬಿಜೆಪಿ ಸರ್ಕಾರ ರಚನೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಬೆಳಿಗ್ಗೆ ಕೋಲ್ಕತ್ತಾಗೆ ಆಗಮಿಸಿದರು.
ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಪಕ್ಷದ ಪ್ರಮುಖರು ಅದ್ದೂರಿಯಾಗಿ ಸ್ವಾಗತಿಸಿದರು. ಬಳಿಕ ಅವರು ನ್ಯೂ ಟೌನ್‌ನಲ್ಲಿರುವ ಖಾಸಗಿ ಹೋಟೆಲ್‌ಗೆ ತೆರಳಿದರು.
ಮಧ್ಯಾಹ್ನ ಬಿಶ್ವ ಬಾಂಗ್ಲಾ ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಮಿತ್ ಶಾ ಭಾಗವಹಿಸಲಿದ್ದು, ಈ ಸಭೆಯಲ್ಲಿ ನೂತನ ಮುಖ್ಯಮಂತ್ರಿ ಹೆಸರನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ.
ಶನಿವಾರ ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನೂತನ ಸರ್ಕಾರದ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಹಾಗೂ ಎನ್‌ಡಿಎ ಆಡಳಿತವಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.
ಈ ಬಾರಿಯ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ 2026ಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 15 ವರ್ಷಗಳ ಆಡಳಿತಕ್ಕೆ ತೆರೆ ಎಳೆದ ಬಿಜೆಪಿ, ಭರ್ಜರಿ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದೆ. ರಾಜಕೀಯ ವಿಶ್ಲೇಷಕರ ಪ್ರಕಾರ, ಇದು ಮಮತಾ ಬ್ಯಾನರ್ಜಿ ಅವರ ರಾಜಕೀಯ ಜೀವನದ ಅತಿದೊಡ್ಡ ಹಿನ್ನಡೆಯಾಗಿದೆ.
ಇದಕ್ಕೂ ಮುನ್ನ ಹೊಸ ಸರ್ಕಾರ ರಚನೆಗೆ ಹಾದಿ ಸುಗಮಗೊಳಿಸುವ ಉದ್ದೇಶದಿಂದ ರಾಜ್ಯಪಾಲ ಆರ್.ಎನ್. ರವಿ ಗುರುವಾರವೇ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ.
ನಾಳಿನ ಪ್ರಮಾಣ ವಚನ ಸಮಾರಂಭದೊಂದಿಗೆ “ಸೋನಾರ್ ಬಾಂಗ್ಲಾ” ನಿರ್ಮಾಣದ ಘೋಷಣೆಯಡಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಆಡಳಿತ ಅಧಿಕೃತವಾಗಿ ಆರಂಭವಾಗಲಿದೆ.