ನಿರುದ್ಯೋಗ ಹಾಗೂ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ವಿರೋಧಿಸಿ ಜೈಪುರದಲ್ಲಿ ನಡೆದ ಸಾರ್ವಜನಿಕ ಪ್ರತಿಭಟನೆಯ ವೇಳೆ ಜಿರಳೆ ಜನತಾ ಪಕ್ಷ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಶಿಕ್ಷಣ ಕ್ಷೇತ್ರದಲ್ಲಿನ ಭ್ರಷ್ಟಾಚಾರ, ನಿರುದ್ಯೋಗ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ಸಿಜೆಪಿ ವತಿಯಿಂದ ಪೊಲೀಸರ ಅನುಮತಿ ಪಡೆದು ಪ್ರತಿಭಟನೆ ಆಯೋಜಿಸಲಾಗಿತ್ತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಭಿಜೀತ್ ದೀಪ್ಕೆ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ, ಜನಸಮೂಹದಲ್ಲಿದ್ದ ವ್ಯಕ್ತಿಯೊಬ್ಬ ಹಠಾತ್ ಅವರ ಬಳಿ ಬಂದು ಸಾರ್ವಜನಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ
ಘಟನೆಯ ಬಳಿಕ ಸ್ಥಳದಲ್ಲಿದ್ದ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ದಾಳಿಕೋರನನ್ನು ತಡೆಯಲು ಮುಂದಾಗಿದ್ದು, ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಪರಿಸ್ಥಿತಿ ಕೈಮೀರದಂತೆ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ತಕ್ಷಣ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಹಲ್ಲೆ ನಡೆಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆತನ ಗುರುತು ಕುರಿತು ಇನ್ನೂ ಅಧಿಕೃತ ಮಾಹಿತಿ ಬಹಿರಂಗಪಡಿಸಿಲ್ಲ.
ಘಟನೆಯ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಅಭಿಜೀತ್ ದೀಪ್ಕೆ, “ದೈಹಿಕ ದಾಳಿಗಳು ಭಯ ಮತ್ತು ಹೇಡಿತನದ ಸಂಕೇತ. ಇಂತಹ ಬೆದರಿಕೆಗಳ ನಡುವೆಯೂ ನಾವು ನಮ್ಮ ಧ್ವನಿಯನ್ನು ಮೌನಗೊಳಿಸುವುದಿಲ್ಲ. ಶಾಂತಿಯುತ ಹೋರಾಟವನ್ನು ಮುಂದುವರಿಸುತ್ತೇವೆ. ನಾನು ಗಾಂಧಿ ಮತ್ತು ಅಂಬೇಡ್ಕರ್ ಅವರ ಆದರ್ಶಗಳನ್ನು ಅನುಸರಿಸುತ್ತಿದ್ದು, ಪ್ರೀತಿ ಮತ್ತು ಶಾಂತಿಯ ಮಾರ್ಗದಲ್ಲೇ ಈ ಹೋರಾಟವನ್ನು ಮುಂದುವರಿಸುತ್ತೇನೆ” ಎಂದು ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ದೆಹಲಿ, ಪುಣೆ, ಅಮೃತಸರ ಹಾಗೂ ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳಲ್ಲಿ ಪರೀಕ್ಷಾ ಅಕ್ರಮಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಅಭಿಜೀತ್ ದೀಪೈ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಅಭಿಯಾನ ನಡೆಸುತ್ತಿದೆ.
ಜೈಪುರದಲ್ಲಿ ನಡೆದ ಈ ಹಲ್ಲೆಯ ಹಿಂದೆ ಯಾವುದೇ ರಾಜಕೀಯ ಉದ್ದೇಶವಿದೆಯೇ ಎಂಬ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಪ್ರಕರಣದ ಹೆಚ್ಚಿನ ಮಾಹಿತಿಗಾಗಿ ಪರಿಶೀಲನೆ ಮುಂದುವರಿದಿದೆ