ಇಟಾನಗರ್ | ಜು. 9: ಅರುಣಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ನಡುವೆ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಇನ್ನೂ ನಾಲ್ವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಲೋಹಿತ್ ಜಿಲ್ಲೆಯ ಶಿವಾಜಿ ನಗರದಲ್ಲಿ ಬೆಟ್ಟದ ಇಳಿಜಾರಿನಲ್ಲಿ ಭೂಕುಸಿತ ಸಂಭವಿಸಿದ್ದು, ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ವಲಸೆ ಕಾರ್ಮಿಕರು ಮಣ್ಣಿನಡಿ ಸಿಲುಕಿದರು. ಇದುವರೆಗೆ ಇಬ್ಬರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.



ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್‌ಡಿಆರ್‌ಎಫ್) ಹಾಗೂ ಅರುಣಾಚಲ ಪ್ರದೇಶ ಪೊಲೀಸ್ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಅಪಾಯದ ಪ್ರದೇಶಗಳಲ್ಲಿರುವ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.
ಇದೇ ವೇಳೆ, ನಿರಂತರ ಮಳೆಯಿಂದ ತೆರಪ್ ಜಿಲ್ಲೆಯ ಖೋನ್ನಾ–ಲಾಜು ರಸ್ತೆಯ ಸುಮಾರು 110 ಮೀಟರ್ ಉದ್ದದ ಭಾಗ ಕುಸಿದು ಹಲವು ಗ್ರಾಮಗಳ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.
ಹವಾಮಾನ ಇಲಾಖೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಹಠಾತ್ ಪ್ರವಾಹ ಹಾಗೂ ಭೂಕುಸಿತದ ಅಪಾಯ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.


