ದೇಣಿಗೆ ದುರ್ಬಳಕೆ ಪ್ರಕರಣ: ಎಸ್‌ಐಟಿ ತಂಡ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ, ಪ್ರಸ್ತುತ ಭದ್ರತಾ ವ್ಯವಸ್ಥೆಯ ಪರಿಶೀಲನೆ

ಅಯೋಧ್ಯೆ ರಾಮಮಂದಿರದ ದೇಣಿಗೆ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿ, ರಾಮಮಂದಿರ ಟ್ರಸ್ಟ್‌ನ ಮಾಜಿ ಸದಸ್ಯರಾದ ಅನಿಲ್ ಮಿಶ್ರ ಮತ್ತು ಗೋಪಾಲ್ ರಾವ್ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಮತ್ತೊಮ್ಮೆ ವಿಚಾರಣೆ ನಡೆಸಲಿದೆ. ಜೊತೆಗೆ ಟ್ರಸ್ಟ್‌ನ ಇತರ ಪದಾಧಿಕಾರಿಗಳಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತದೆ. ಮಧ್ಯಂತರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಗೋವಿಂದ ದೇವ್ ಗಿರಿಯನ್ನು ಎಸ್‌ಐಟಿ ತಂಡ ಭೇಟಿ ಮಾಡಲಿದೆ. ಅಲ್ಲದೆ, ಎಸ್‌ಐಟಿ ತಂಡ ಅಯೋಧ್ಯೆ ರಾಮಮಂದಿರಕ್ಕೂ ಭೇಟಿ ನೀಡಿ, ಪ್ರಸ್ತುತ ಜಾರಿಯಲ್ಲಿರುವ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಲಿದೆ. ಅಂತಿಮ ವರದಿ ಸಲ್ಲಿಸುವ ಮುನ್ನ ಈ ಹೊಸ ಕ್ರಮ ಕೈಗೊಳ್ಳಲಾಗಿದೆ.

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕಾಗಿ ಸಂಗ್ರಹಿಸಲಾದ ದೇಣಿಗೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಕುರಿತ ಅರ್ಜಿಗಳ ವಿಚಾರಣೆಯಲ್ಲಿ, ಸುಪ್ರೀಂ ಕೋರ್ಟ್ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ವರದಿ ಸಲ್ಲಿಸುವಂತೆ ಕೇಳಿತ್ತು. ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಮುಂದಿನ ವಾರ ಪರಿಗಣಿಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಪೀಠವು ಕೇಂದ್ರ ಸರ್ಕಾರ, ಉತ್ತರ ಪ್ರದೇಶ ಸರ್ಕಾರ ಹಾಗೂ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ಗೆ ನೋಟಿಸ್ ಜಾರಿ ಮಾಡಿದೆ. ತನಿಖೆಯ ಪ್ರಗತಿ ಹಾಗೂ ಎಸ್‌ಐಟಿ ರಚನೆಯ ವಿವರಗಳನ್ನು ಒಳಗೊಂಡ ವರದಿಯನ್ನು ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರ ರಚಿಸಿರುವ ಎಸ್‌ಐಟಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ಗೆ ನೋಟಿಸ್ ನೀಡುವುದಕ್ಕೆ ಸಾಲಿಸಿಟರ್ ಜನರಲ್ ಆಕ್ಷೇಪ ವ್ಯಕ್ತಪಡಿಸಿದ್ದರೂ, ನ್ಯಾಯಾಲಯ ಅದನ್ನು ತಿರಸ್ಕರಿಸಿತು. ಈಗಾಗಲೇ ಎಸ್‌ಐಟಿ ರಚನೆಯಾಗಿ ತನಿಖೆ ನಡೆಯುತ್ತಿರುವುದರಿಂದ, ಅರ್ಜಿದಾರರು ಕೇಳಿರುವ ಹೆಚ್ಚುವರಿ ಕ್ರಮಗಳನ್ನು ಕೈಗೊಳ್ಳುವ ಮೊದಲು ತನಿಖೆಯ ಪ್ರಗತಿಯನ್ನು ಪರಿಶೀಲಿಸುವುದು ಅಗತ್ಯ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅಭಿಪ್ರಾಯಪಟ್ಟರು.

SHARE
Loading spinner

Leave a Reply

Your email address will not be published. Required fields are marked *

error: Content is protected !!