ಗುವಾಹಟಿ: ಅಸ್ಸಾಂನಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹ ಭೀಕರ ಸ್ವರೂಪ ಪಡೆದಿದ್ದು, ಕಳೆದ 24 ಗಂಟೆಗಳಲ್ಲಿ ಕನಿಷ್ಠ 31 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ 16 ಜಿಲ್ಲೆಗಳ ಸುಮಾರು ಎಂಟು ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದು, ಈ ಮುಂಗಾರು ಋತುವಿನಲ್ಲಿ ಪ್ರವಾಹ ಸಂಬಂಧಿ ಸಾವಿನ ಸಂಖ್ಯೆ 50ಕ್ಕೂ ಅಧಿಕವಾಗಿದೆ.

ನೆರೆಯ ನಾಗಾಲ್ಯಾಂಡ್ನಲ್ಲಿ ಸುರಿದ ಧಾರಾಕಾರ ಮಳೆಯಿಂದ ನದಿಗಳು ಉಕ್ಕಿ ಹರಿದ ಪರಿಣಾಮ, ಶಿವಸಾಗರ, ಚರಾಯೇವ್ ಹಾಗೂ ಜೋರ್ಹಾಟ್ ಸೇರಿದಂತೆ ಗಡಿಭಾಗದ ಜಿಲ್ಲೆಗಳು ತೀವ್ರ ಜಲಾವೃತಗೊಂಡಿವೆ.ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಶಿವಸಾಗರ ಜಿಲ್ಲೆಯಲ್ಲೇ ನಾಲ್ವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿ 20 ಮಂದಿ ಮೃತಪಟ್ಟಿದ್ದಾರೆ. ಚರಾಯೇವ್ನಲ್ಲಿ ಐವರು, ಗೋಲಾಘಾಟ್ನಲ್ಲಿ ಇಬ್ಬರು ಹಾಗೂ ಜೋರ್ಹಾಟ್ನಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.

ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ, ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾದ ಪರಿಣಾಮ ಅಸ್ಸಾಂನಲ್ಲಿ ಅಪರೂಪದ ಪ್ರಮಾಣದ ಪ್ರವಾಹ ಉಂಟಾಗಿದೆ ಎಂದು ತಿಳಿಸಿದ್ದಾರೆ.ಶಿವಸಾಗರ ಜಿಲ್ಲೆ ಅತ್ಯಂತ ತೀವ್ರ ಹಾನಿಗೊಳಗಾಗಿದ್ದು, 3.6 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಯಲ್ಲೇ 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವ ವರದಿಗಳು ಬಂದಿವೆ. ಜೋರ್ಹಾಟ್ನಲ್ಲಿ 88 ಸಾವಿರ ಹಾಗೂ ಚರಾಯೇವ್ನಲ್ಲಿ 72 ಸಾವಿರಕ್ಕೂ ಅಧಿಕ ಜನರು ಪ್ರವಾಹದಿಂದ ಬಾಧಿತರಾಗಿದ್ದಾರೆ.

ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಶರ್ಮಾ, ಮೃತರ ಕುಟುಂಬಗಳಿಗೆ ತಲಾ ₹4 ಲಕ್ಷ ಪರಿಹಾರ ಘೋಷಿಸಿದ್ದಾರೆ.ಪ್ರಸ್ತುತ ರಾಜ್ಯದ 10 ಜಿಲ್ಲೆಗಳಲ್ಲಿ 273 ಪರಿಹಾರ ಶಿಬಿರಗಳು ಮತ್ತು ಪರಿಹಾರ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, 12,284 ನಿರಾಶ್ರಿತರಿಗೆ ಆಶ್ರಯ ಕಲ್ಪಿಸಲಾಗಿದೆ.
ಭಾರತೀಯ ಸೇನೆ, ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (ಎನ್ಡಿಆರ್ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಅಸ್ಸಾಂ ಪೊಲೀಸರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, 6,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ.


