ಪ್ರಶ್ನೆಪತ್ರಿಕೆ ಸೋರಿಕೆಗೆ ಬ್ರೇಕ್: ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಮಸೂದೆಗೆ ಕೇಂದ್ರದ ಗ್ರೀನ್ ಸಿಗ್ನಲ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಸಾರ್ವಜನಿಕ ಪರೀಕ್ಷೆಗಳಲ್ಲಿನ ಅಕ್ರಮಗಳಿಗೆ ಕಟ್ಟುನಿಟ್ಟಿನ ಕಡಿವಾಣ ಹಾಕುವ ಉದ್ದೇಶದಿಂದ ತರಲಾಗಿರುವ ‘ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ಮಾರ್ಗಗಳ ತಡೆ) ತಿದ್ದುಪಡಿ ಮಸೂದೆ–2026’ಯನ್ನು ಕೇಂದ್ರ ಸರ್ಕಾರ ಅಂಗೀಕರಿಸಲು ಮುಂದಾಗಿದೆ. ವಿರೋಧ ಪಕ್ಷಗಳು ಚರ್ಚೆಯನ್ನು ಬಹಿಷ್ಕರಿಸಿದರೂ ಮಸೂದೆ ಅಂಗೀಕಾರದ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸ್ಪಷ್ಟಪಡಿಸಿದ್ದಾರೆ.

ಲೋಕಸಭೆಯಲ್ಲಿ ಮಾತನಾಡಿದ ಅವರು, ಮಸೂದೆಯ ಕುರಿತು ಚರ್ಚೆಗೆ ಸರ್ಕಾರ ಸಂಪೂರ್ಣ ಸಿದ್ಧವಿದ್ದು, ಪ್ರತಿಪಕ್ಷಗಳು ಭಾಗವಹಿಸದಿದ್ದರೂ ಶಾಸನ ರೂಪಿಸುವ ಪ್ರಕ್ರಿಯೆ ಸ್ಥಗಿತಗೊಳ್ಳುವುದಿಲ್ಲ ಎಂದರು. ಸಂಜೆ 5 ಗಂಟೆಯಿಂದ ಸುಮಾರು ಎಂಟು ಗಂಟೆಗಳ ಕಾಲ ಮಸೂದೆಯ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಎನ್‌ಡಿಎ ಪರವಾಗಿ ಬಾನ್ಸುರಿ ಸ್ವರಾಜ್, ತೇಜಸ್ವಿ ಸೂರ್ಯ, ಶಶಾಂಕ್ ಮಣಿ ತ್ರಿಪಾಠಿ, ಅನುರಾಗ್ ಠಾಕೂರ್, ಶ್ರೀಕಾಂತ್ ಶಿಂಧೆ, ಅರುಣ್ ಭಾರತಿ, ಅಲೋಕ್ ಸುಮನ್, ಅನುಪ್ರಿಯಾ ಪಟೇಲ್ ಹಾಗೂ ಸಯಾಲಿ ಘೋಷ್ ಸೇರಿದಂತೆ ಸುಮಾರು 12 ಸಂಸದರು ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಿರಣ್ ರಿಜಿಜು, ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಹಿತಾಸಕ್ತಿ ಹಾಗೂ ಅವರ ಆತಂಕವನ್ನು ಗಮನದಲ್ಲಿಟ್ಟುಕೊಂಡು ಈ ಕಾನೂನನ್ನು ತರಲಾಗುತ್ತಿದೆ ಎಂದು ತಿಳಿಸಿದರು. ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಶಿಕ್ಷೆ ವಿಧಿಸುವ ನಿಬಂಧನೆಗಳನ್ನು ಮಸೂದೆಯಲ್ಲಿ ಸೇರಿಸಲಾಗಿದೆ ಎಂದರು.

ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣ ಪಾರದರ್ಶಕ, ವಿಶ್ವಾಸಾರ್ಹ ಹಾಗೂ ಅಕ್ರಮಮುಕ್ತಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವ ಶಿಕ್ಷಣ ಸುಧಾರಣಾ ಕ್ರಮಗಳ ಭಾಗವಾಗಿ ಈ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿದೆ ಎಂದು ಸಚಿವರು ವಿವರಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!