ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 12,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸೂಚಿಸಿದೆ.

ದೆಹಲಿಯಲ್ಲಿ CWRC ಅಧ್ಯಕ್ಷ ವಿನೀತ್ ಗುಪ್ತಾ ನೇತೃತ್ವದಲ್ಲಿ ನಡೆದ 140ನೇ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಂತೆ ಕರ್ನಾಟಕದಿಂದ ತಮಿಳುನಾಡಿಗೆ ಸುಮಾರು 16 ಟಿಎಂಸಿ ನೀರು ಹರಿಯುವ ಸಾಧ್ಯತೆಯಿದೆ.
ಸಭೆಯಲ್ಲಿ ಕರ್ನಾಟಕದ ಪರವಾಗಿ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಅವರು ರಾಜ್ಯದ ಜಲಾಶಯಗಳ ನೀರಿನ ಮಟ್ಟ ಹಾಗೂ ವಾಸ್ತವ ಸ್ಥಿತಿಯನ್ನು ವಿವರಿಸಿದರು. ಮುಂದಿನ ಮಳೆ ಹಾಗೂ ಜಲಾಶಯಗಳಲ್ಲಿನ ನೀರಿನ ಸಂಗ್ರಹವನ್ನು ಪರಿಗಣಿಸಿ CWRC ಈ ಶಿಫಾರಸು ಮಾಡಿದೆ.

CWRC ಶಿಫಾರಸಿನ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.

