ಅಮರಾವತಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ತೀವ್ರಗೊಂಡು ‘ಅರ್ನಾಬ್’ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆಯಿದ್ದು, ಅಕ್ಟೋಬರ್ 28ರಂದು ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

ಚಂಡಮಾರುತದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಒಡಿಶಾದ ಗಂಜಾಂ, ಗಜಪತಿ, ರಾಯಗಡ, ಕೊರಾಪುಟ್ ಮತ್ತು ಮಲ್ಕನ್‌ಗಿರಿ ಜಿಲ್ಲೆಗಳಲ್ಲಿ ಅ.28 ಮತ್ತು 29ರಂದು ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಈ ಜಿಲ್ಲೆಗಳಿಗೆ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ.

ರಕ್ಷಣಾ ಕಾರ್ಯಾಚರಣೆಗಾಗಿ ವಿಪತ್ತು ನಿರ್ವಹಣಾ ತಂಡಗಳನ್ನು ಸಜ್ಜುಗೊಳಿಸಲಾಗಿದ್ದು, ಚಂಡಮಾರುತ ಆಶ್ರಯ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ತಮಿಳುನಾಡು ಮತ್ತು ಪುದುಚೇರಿಯ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

