ನವದೆಹಲಿ: ಪ್ಯಾಕೇಜ್ಡ್ ಕುಡಿಯುವ ನೀರಿನ ಗುಣಮಟ್ಟವನ್ನು ಪರಿಶೀಲಿಸುವಂತೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಗುಣಮಟ್ಟದ ಮಾನದಂಡಗಳನ್ನು ಪಾಲಿಸದ ಕುಡಿಯುವ ನೀರಿನ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆಯೂ ನಿರ್ದೇಶನ ನೀಡಿದೆ.ಬಿಸ್ಲೆರಿ ಕುಡಿಯುವ ನೀರಿನ ಮಾದರಿಯಲ್ಲಿ ಗುಣಮಟ್ಟದ ಲೋಪಗಳು ಪತ್ತೆಯಾದ ಬೆನ್ನಲ್ಲೇ FSSAI ಈ ಕ್ರಮಕ್ಕೆ ಮುಂದಾಗಿದೆ.

ಸುರಕ್ಷಿತವಲ್ಲದ ಪ್ಯಾಕೇಜ್ಡ್ ಕುಡಿಯುವ ನೀರನ್ನು ಮಾರಾಟ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಿಸ್ಲೆರಿ ಇಂಟರ್ನ್ಯಾಷನಲ್ ಕಂಪನಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಈ ಹಿಂದೆ ಅನುಮತಿ ನೀಡಿತ್ತು.

ಪರಿಶೀಲನೆಯ ವೇಳೆ ನೀರಿನಲ್ಲಿ ಅನುಮತಿಸಲಾದ ಮಿತಿಗಿಂತ ಹೆಚ್ಚಿನ ಪ್ರಮಾಣದ ಬ್ರೋಮೇಟ್ ಪತ್ತೆಯಾಗಿತ್ತು. ಇದರಿಂದಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ಅಡಿಯಲ್ಲಿ ಈ ನೀರನ್ನು ಅಸುರಕ್ಷಿತವೆಂದು ಘೋಷಿಸಲಾಗಿತ್ತು.

ಇದನ್ನು ಪ್ರಶ್ನಿಸಿ ಕಂಪನಿ ಮೇಲ್ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ, ಹೆಚ್ಚಿನ ಪರೀಕ್ಷೆಗಾಗಿ ನೀರಿನ ಮಾದರಿಯನ್ನು ರೆಫರಲ್ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆದರೆ, ಎರಡನೇ ಪ್ರಯೋಗಾಲಯದ ಪರೀಕ್ಷೆಯಲ್ಲಿಯೂ ನೀರು ಅಸುರಕ್ಷಿತವಾಗಿದೆ ಎಂಬುದು ದೃಢಪಟ್ಟಿದೆ. ಅಲ್ಲದೆ, ನೀರಿನಲ್ಲಿ ಪಾಲಿನ್ಯೂಕ್ಲಿಯರ್ ಅರೋಮ್ಯಾಟಿಕ್ ಹೈಡ್ರೋಕಾರ್ಬನ್ಗಳು (PAHs) ಇರುವುದು ಪತ್ತೆಯಾಗಿದೆ.ಬ್ರೋಮೇಟ್ ಮತ್ತು PAHs ಕೆಲವು ರೂಪಗಳಲ್ಲಿ ಕ್ಯಾನ್ಸರ್ ಅಪಾಯಕ್ಕೆ ಕಾರಣವಾಗಬಹುದಾದ ರಾಸಾಯನಿಕಗಳಾಗಿವೆ.

ಇತ್ತೀಚಿನ ದಿನಗಳಲ್ಲಿ ಆಹಾರ ಉದ್ಯಮದ ಸಂಸ್ಥೆಗಳು ಹಾಗೂ ಇ-ಕಾಮರ್ಸ್ ಕಂಪನಿಗಳ ವಿರುದ್ಧದ ತಪಾಸಣೆ ಮತ್ತು ಕ್ರಮಗಳನ್ನು FSSAI ತೀವ್ರಗೊಳಿಸಿದೆ. ಇದರ ಭಾಗವಾಗಿಯೇ ಬಿಸ್ಲೆರಿ ಕಂಪನಿಯ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾದರಿಯನ್ನು ಪರೀಕ್ಷಿಸಲಾಗಿತ್ತು. ಇದೀಗ ರಾಜ್ಯಗಳಾದ್ಯಂತ ಪ್ಯಾಕೇಜ್ಡ್ ಕುಡಿಯುವ ನೀರಿನ ಗುಣಮಟ್ಟ ಪರಿಶೀಲನೆಗೆ ಸೂಚನೆ ನೀಡಲಾಗಿದೆ.

