ಚೆನ್ನೈ: ಇಂಡಿಯಾ ಮೈತ್ರಿಕೂಟದ ವಿರೋಧದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪರಿಷ್ಕೃತ ಕ್ಷೇತ್ರ ಪುನರ್ವಿಂಗಡಣೆ ಮಸೂದೆಯನ್ನು ಬೆಂಬಲಿಸಲು ಡಿಎಂಕೆ ನಿರ್ಧರಿಸಿದೆ. ಶೇ.50ರಷ್ಟು ಲೋಕಸಭಾ ಸ್ಥಾನಗಳ ಹೆಚ್ಚಳಕ್ಕೆ ಪಕ್ಷ ಒಪ್ಪಿಗೆ ಸೂಚಿಸಿದೆ ಎಂದು ಡಿಎಂಕೆ ಸಂಸದ ಎ. ರಾಜಾ ಸ್ಪಷ್ಟಪಡಿಸಿದ್ದಾರೆ.
ಕ್ಷೇತ್ರ ಪುನರ್ವಿಂಗಡಣೆಯ ಬಳಿಕವೂ ಶೇ.7.18ರಷ್ಟು ಸ್ಥಾನಗಳ ಪ್ರಾತಿನಿಧ್ಯವನ್ನು ಉಳಿಸಿಕೊಳ್ಳಬೇಕು ಎಂದು ಡಿಎಂಕೆ ಈ ಹಿಂದೆ ಒತ್ತಾಯಿಸಿತ್ತು. ಕ್ಷೇತ್ರಗಳ ಪುನರ್ವಿಂಗಡಣೆ ನ್ಯಾಯಯುತವಾಗಿ ನಡೆಯಬೇಕು ಎಂಬುದು ಪಕ್ಷದ ಪ್ರಮುಖ ಬೇಡಿಕೆಯಾಗಿತ್ತು. ಶೇ.50ರಷ್ಟು ಸ್ಥಾನಗಳನ್ನು ಹೆಚ್ಚಿಸಿದರೆ ತಮ್ಮ ಪ್ರಾತಿನಿಧ್ಯದಲ್ಲಿ ಶೇ.7.21ರಷ್ಟು ಹೆಚ್ಚಳವಾಗಲಿದೆ ಎಂದು ಎ. ರಾಜಾ ತಿಳಿಸಿದ್ದಾರೆ.

ಪಕ್ಷದ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ಮುಂದಿಟ್ಟಿದ್ದ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ ಎಂದು ಡಿಎಂಕೆಯ ಹಿರಿಯ ನಾಯಕರು ತಿಳಿಸಿದ್ದಾರೆ.
ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರಗಳ ಪುನರ್ವಿಂಗಡಣೆ ನಡೆದರೆ ಸಂಸತ್ತಿನಲ್ಲಿ ತಮ್ಮ ಪ್ರಾತಿನಿಧ್ಯ ಕಡಿಮೆಯಾಗಬಹುದು ಎಂಬ ಆತಂಕ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮನೆಮಾಡಿದೆ. ಇಂತಹ ಸಂದರ್ಭದಲ್ಲಿ ಡಿಎಂಕೆ ಮಸೂದೆಯನ್ನು ಬೆಂಬಲಿಸಲು ಮುಂದಾಗಿದೆ ಎಂಬ ವರದಿಗಳು ರಾಜಕೀಯ ವಲಯದಲ್ಲಿ ಮಹತ್ವ ಪಡೆದಿವೆ.
ಈ ಕುರಿತು ಪ್ರತಿಕ್ರಿಯಿಸಿದ ಪಕ್ಷದ ಹಿರಿಯ ನಾಯಕರೊಬ್ಬರು, “ನಮ್ಮ ನಾಯಕರು ಒತ್ತಾಯಿಸಿದ್ದ ಪ್ರಮುಖ ಅಂಶಗಳನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ” ಎಂದು ತಿಳಿಸಿದ್ದಾರೆ.
ಸಂವಿಧಾನ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲು ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರಕ್ಕೆ ಸಂಸತ್ತಿನಲ್ಲಿ ಕನಿಷ್ಠ ಮೂರನೇ ಎರಡರಷ್ಟು ಸದಸ್ಯರ ಬೆಂಬಲ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಡಿಎಂಕೆಯ ನಿಲುವು ನಿರ್ಣಾಯಕವಾಗಿದೆ. ಲೋಕಸಭೆಯಲ್ಲಿ ಡಿಎಂಕೆಗೆ 22 ಸಂಸದರು ಇದ್ದು, ಮುಂಬರುವ ಸಂಸತ್ ಅಧಿವೇಶನದಲ್ಲಿ ಅವರ ಮತಗಳು ಮಹತ್ವದ ಪಾತ್ರ ವಹಿಸುವ ಸಾಧ್ಯತೆಯಿದೆ.
