ಉಡುಪಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕ್ರೈನ್ ಹರಿದ ಭಯಾನಕ ಘಟನೆ ಉಡುಪಿ ಜಿಲ್ಲೆಯ ಪೆರಂಪಳ್ಳಿಯ ಹೆರ್ಗ ಸೊಸೈಟಿಯ ಮುಂಭಾಗದಲ್ಲಿ ನಡೆದಿದೆ.
ಮಾಹಿತಿಯ ಪ್ರಕಾರ, ಎದುರಿನಿಂದ ಬರುತ್ತಿದ್ದ ಕಾರಿಗೆ ಸೈಡ್ ನೀಡುವ ಭರದಲ್ಲಿ ಕ್ರೈನ್ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಹರಿಸಿದ್ದಾನೆ. ಪರಿಣಾಮವಾಗಿ ಪಾದಾಚಾರಿ ಕ್ರೈನ್ ಚಕ್ರದಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುವನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಇದೀಗ ಜೀವನ್ಮರಣ ಹೋರಾಟ ನಡೆಸುತ್ತಿರುವುದಾಗಿ ತಿಳಿದುಬಂದಿದೆ.
ಘಟನೆಯ ನಂತರ ಕ್ರೈನ್ ಚಾಲಕ ವಾಹನವನ್ನು ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಭಯಾನಕ ಘಟನೆ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪ್ರಕರಣದ ಕುರಿತು ಪೊಲೀಸ್ ಇಲಾಖೆ ತನಿಖೆ ಆರಂಭಿಸಿದೆ.