ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 56,432 ಹುದ್ದೆಗಳನ್ನು ಭರ್ತಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ … !

ಬೆಂಗಳೂರು:ರಾಜ್ಯದಲ್ಲಿ ಸರ್ಕಾರಿ ಕೆಲಸಕ್ಕಾಗಿ ಕಾಯುತ್ತಿರುವ ಲಕ್ಷಾಂತರ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ದೀರ್ಘಕಾಲದ ಹೋರಾಟ ಮತ್ತು ಪ್ರತಿಭಟನೆಗಳ ಫಲವಾಗಿ, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 56,432 ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಮುಂದಿನ ಒಂದು ತಿಂಗಳ ಒಳಗಾಗಿ ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲು ಸರ್ಕಾರ ಆದೇಶಿಸಿದೆ. ಸದ್ಯಕ್ಕೆ ಶೇ. 56ರಷ್ಟು ಮೀಸಲಾತಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ, ಹಳೆಯ ಶೇ. 50ರ ಮೀಸಲಾತಿ ನಿಯಮದಂತೆಯೇ (ಎಸ್.ಸಿ ಶೇ. 15 ಹಾಗೂ ಎಸ್.ಟಿ ಶೇ. 3) ಈ ನೇಮಕಾತಿ ನಡೆಯಲಿದೆ. ಒಟ್ಟು ಹುದ್ದೆಗಳಲ್ಲಿ ಹೈದರಾಬಾದ್-ಕರ್ನಾಟಕ (ಕಲ್ಯಾಣ ಕರ್ನಾಟಕ) ಭಾಗದ ಅಭ್ಯರ್ಥಿಗಳಿಗೆ ಮೀಸಲಾದ 371 ಜೆ ಅಡಿಯಲ್ಲಿ 32,132 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಕೆಪಿಎಸ್ಸಿ ಮತ್ತು ಕೆಇಎ ಮೂಲಕ 4,409 ಹುದ್ದೆಗಳು ಹಾಗೂ ಹಣಕಾಸು ಇಲಾಖೆ ಅನುಮೋದನೆ ನೀಡಿರುವ ಹೊಸ 24,300 ಹುದ್ದೆಗಳು ಸೇರಿ ಒಟ್ಟು 56,432 ಹುದ್ದೆಗಳಿಗೆ ಹಸಿರು ನಿಶಾನೆ ಸಿಕ್ಕಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2.5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಇತ್ತೀಚೆಗೆ ಧಾರವಾಡ ಸೇರಿದಂತೆ ರಾಜ್ಯದ ವಿವಿಧೆಡೆ ಬೃಹತ್ ಪ್ರತಿಭಟನೆಗಳನ್ನು ನಡೆಸಿದ್ದರು. ಈ ಒತ್ತಡಕ್ಕೆ ಮಣಿದಿರುವ ಸರ್ಕಾರ, ಮೊದಲ ಹಂತದಲ್ಲಿ ಬೃಹತ್ ಪ್ರಮಾಣದ ಹುದ್ದೆಗಳ ಭರ್ತಿಗೆ ಮುಂದಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!