ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭವಿಷ್ಯದ ದೃಷ್ಟಿಯಿಂದ ಜೆಡಿಎಸ್ ಪಕ್ಷವನ್ನು ಬಲಿಷ್ಠಗೊಳಿಸುವ ಉದ್ದೇಶದಿಂದ ಕರಾವಳಿ ಭಾಗದ ಕೆಲವು ಜನಪ್ರಿಯ ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಲಾಗಿದೆ ಎಂದು ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎಂ.ಬಿ. ಸದಾಶಿವ ತಿಳಿಸಿದ್ದಾರೆ.
ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಜನಪ್ರಿಯ ನಾಯಕರು ಹಾಗೂ ವಿವಿಧ ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಶಶಿರಾಜ್ ಶೆಟ್ಟಿ ಕೊಳಂಬೆ, ಯೋಗೀಶ್ ಕುಮಾರ್ ಜೆಪ್ಪು ಮತ್ತು ಧರ್ಮೇಂದ್ರ ಅವರು ಮಾರ್ಚ್ 5ರಂದು ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಹೇಳಿದರು.
ಏಪ್ರಿಲ್ ತಿಂಗಳೊಳಗೆ ಜೆಡಿಎಸ್ ಪಕ್ಷದ ಶಕ್ತಿ ಪ್ರದರ್ಶನದ ಉದ್ದೇಶದಿಂದ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಕರ್ನಾಟಕ ಬಜೆಟ್ ಕುರಿತು ಪ್ರತಿಕ್ರಿಯಿಸಿದ ಸದಾಶಿವ, ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ನಲ್ಲಿ ಕರಾವಳಿ ಜಿಲ್ಲೆಯ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ರಬ್ಬರ್, ಅಡಿಕೆ, ಗೇರುಬೀಜ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಿಲ್ಲ. ಮರಳು ಮತ್ತು ಕೆಂಪುಕಲ್ಲು ಸಮಸ್ಯೆಗಳ ಕುರಿತು ಕೂಡ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಇದು ಬಡವರ ವಿರುದ್ಧದ ಬಜೆಟ್ ಎಂದು ಟೀಕಿಸಿದರು.
ಮುಂದಿನ ದಿನಗಳಲ್ಲಿ ಇತರ ರಾಜಕೀಯ ಪಕ್ಷಗಳ ಧೋರಣೆಗೆ ಬೇಸತ್ತು ಇನ್ನಷ್ಟು ನಾಯಕರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಮಾಧವ್, ಶಶಿರಾಜ್ ಶೆಟ್ಟಿ ಕೊಳಂಬೆ, ಯೋಗೀಶ್ ಕುಮಾರ್ ಜೆಪ್ಪು ಹಾಗೂ ಧರ್ಮೇಂದ್ರ ಉಪಸ್ಥಿತರಿದ್ದರು.