ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆಯನ್ನು ರವಿವಾರ ದೇವಾಲಯದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಜಾತ್ರೆಯ ಯಶಸ್ಸಿಗಾಗಿ ಶ್ರೀ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ಮಾಡಲಾಯಿತು. ಈ ವರ್ಷದ ವಾರ್ಷಿಕ ಜಾತ್ರೆ ಏಪ್ರಿಲ್ 10ರಿಂದ ಆರಂಭವಾಗಿ ಏಪ್ರಿಲ್ 17ರಂದು ಮಹಾರಥೋತ್ಸವ ನಡೆಯಲಿದೆ ಎಂದು ತಿಳಿಸಲಾಯಿತು.
ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ಶಾಸಕ ಅಶೋಕ್ ರೈ ಮಾತನಾಡಿ, ಮಹಾಲಿಂಗೇಶ್ವರ ದೇವರ ಜಾತ್ರೆಯನ್ನು ಈ ಬಾರಿಯೂ ಅತ್ಯಂತ ಅದ್ದೂರಿಯಾಗಿ ಹಾಗೂ ಯಶಸ್ವಿಯಾಗಿ ನಡೆಸಲು ಭಕ್ತರ ಸಹಕಾರ ಅಗತ್ಯವಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ದೇವರಿಗೆ ಬಂಗಾರದ ಕವಚದಿಂದ ಶೃಂಗಾರ ಮಾಡುವ ಕನಸು ಇದ್ದು, ಅದಕ್ಕೂ ಭಕ್ತಕೋಟಿಯ ಸಹಕಾರ ಬೇಕು ಎಂದು ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಸದಸ್ಯರಾದ ಕೃಷ್ಣವೇಣಿ, ಮಹಾಬಲ ರೈ ವಳತ್ತಡ್ಕ, ಈಶ್ವರ ಬೆಡೇಕರ್, ಸುಭಾಶ್ ರೈ ಬೆಳ್ಳಿಪ್ಪಾಡಿ, ನಳಿನಿ ಪಿ. ಶೆಟ್ಟಿ, ವಿನಯ ಸುವರ್ಣ, ಪ್ರಧಾನ ಅರ್ಚಕ ವೇ. ಮೂ. ವಸಂತ ಕೆದಿಲಾಯ, ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್, ವ್ಯವಸ್ಥಾಪಕ ಹರೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಜಾತ್ರೆಯ ಸಂದರ್ಭ ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆಯಿದ್ದು, ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.