ಉಡುಪಿ: ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾ. 24ರಂದು ಬೆಳಿಗ್ಗೆ ಮಾಳ ಮುಳ್ಳೂರು ಪ್ರದೇಶದಲ್ಲಿ ನಡೆದಿದೆ.
ನವೀನ್ ಬಜಗೋಳಿ (45) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಅವರು ವೆಲ್ಡಿಂಗ್ ಕೆಲಸ ಮಾಡುತ್ತಿದ್ದು, ಜೊತೆಗೆ ಹಾವು ಹಿಡಿಯುವ ಕಾರ್ಯದಲ್ಲೂ ತೊಡಗಿಸಿಕೊಂಡಿದ್ದರು.
ಇಂದು ಬೆಳಿಗ್ಗೆ ಹಾವನ್ನು ಹಿಡಿದು ಕಾಡಿಗೆ ಬಿಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ನವೀನ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಸ್ಕೂಟಿಯ ಸಹಸವಾರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.