ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕುಂದಾಪುರದ ಕೋಟೇಶ್ವರ ಸಮೀಪದ ಯುವ ಮೆರಿಡಿಯನ್ ಹೆಲಿಪ್ಯಾಡ್ ಬಳಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಉಪಚುನಾವಣೆಯಲ್ಲಿ ಆಡಳಿತದಲ್ಲಿರುವ ಪಕ್ಷದ ಪರ ಮತದಾರರ ಒಲವು ಇರುತ್ತದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಮನೆಮನೆಗೂ ತಲುಪಿದ್ದು, ಜನರ ಆದಾಯವೂ ಹೆಚ್ಚಾಗಿದೆ. ವಿಶೇಷವಾಗಿ ಮಹಿಳಾ ಮತದಾರರು ಸಂತೋಷದಲ್ಲಿದ್ದಾರೆ ಎಂದು ಹೇಳಿದರು.
ಎರಡೂ ಕ್ಷೇತ್ರಗಳಲ್ಲಿ ಗೆಲುವು ನಮ್ಮದೇ ಆಗಲಿದೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಟಿಕೆಟ್ ಕೇಳುವ ಹಕ್ಕು ಇದ್ದರೂ, ಅಂತಿಮವಾಗಿ ಗೆಲುವೇ ನಮ್ಮ ಮಾನದಂಡವಾಗಿದೆ ಎಂದರು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಿರುವುದಾಗಿ ತಿಳಿಸಿ, ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.
ವರಾಹಿ ಯೋಜನೆ: ಯಾರಿಗೂ ಅನ್ಯಾಯವಾಗದಂತೆ ಕ್ರಮ
ವರಾಹಿ ಯೋಜನೆಗೆ ಸಂಬಂಧಿಸಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಈಗಾಗಲೇ ಎರಡೂ ಭಾಗದ ರೈತರು ಮನವಿ ಸಲ್ಲಿಸಿದ್ದು, ಯಾರಿಗೂ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತರಿಗೆ ಅನುಕೂಲವಾಗುವಂತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಇದೇ ವೇಳೆ ಬೈಂದೂರು ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಕೆಲವು ಸರ್ಕಾರಿ ಬಸ್‌ಗಳು ಪ್ರವೇಶಿಸದಿರುವ ಸಮಸ್ಯೆ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆಯನ್ನು ಶೀಘ್ರ ಪರಿಹರಿಸಲಾಗುವುದು ಎಂದು ತಿಳಿಸಿದ್ದಾರೆ.