ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಾರ್ಕೂರು ನಿವಾಸಿ ಪ್ರವೀಣ್ ಕುಮಾರ್ ಕೆ ಬಂಧಿತ ಆರೋಪಿಯಾಗಿದ್ದು, ಅವರಿಂದ ಸುಮಾರು 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 7,500 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಹೇರಾಡಿ ಗ್ರಾಮದ ನಿವಾಸಿ ಎಂ. ಮಂಜುನಾಥ ರಾವ್ ಹಾಗೂ ಅವರ ಪತ್ನಿ ಮನೆಗೆ ಬೀಗ ಹಾಕಿ ಬಾರ್ಕೂರಿನಲ್ಲಿ ನಡೆಯುತ್ತಿದ್ದ ನಾಗಮಂಡಲ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ, ಕಳ್ಳ ಮನೆಗೆ ನುಗ್ಗಿ ಬೆಡ್ರೂಮ್ನಲ್ಲಿದ್ದ ಗೋಡ್ರೇಜ್ ಬೀಗ ಒಡೆದು ಸುಮಾರು 14,67,000 ರೂ. ಮೌಲ್ಯದ ಚಿನ್ನಾಭರಣ ಮತ್ತು 49,000 ರೂ. ನಗದು ಕಳವು ಮಾಡಿಕೊಂಡು ಪರಾರಿಯಾಗಿದ್ದ.
ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಕಳುವಾದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.