ಧರ್ಮಸ್ಥಳ (ದಕ್ಷಿಣ ಕನ್ನಡ):
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪದ ನೇತ್ರಾವತಿ ಸ್ನಾನಘಟ್ಟದ ಬಳಿ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಈ ಮೃತದೇಹ ಕಂಡುಬಂದಿದೆ. ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆ ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಪೊಲೀಸರು ಮೃತದೇಹದ ಮಹಜರು ನಡೆಸಿ ಹೆಚ್ಚಿನ ಪರಿಶೀಲನೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಮೃತರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ.
ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.