ರಾಜ್ಯದಲ್ಲಿ ಸ್ಥಳೀಯಾಡಳಿತ ಚುನಾವಣೆ ತಕ್ಷಣ ನಡೆಯಲಿ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆಗ್ರಹಿಸಿದ್ದಾರೆ.
ಕರ್ನಾಟಕ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲು ತಕ್ಷಣ ಕ್ರಮಕೈ ಗೊಳ್ಳಬೇಕು ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಸುದ್ದಿ ಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಬಿಡುಗಡೆಯಾಗಬೇಕಿದ್ದ ಸುಮಾರು 2133 ಕೋಟಿ ರೂ. ಅನುದಾನ ವನ್ನು ಕೇಂದ್ರ ಸರ್ಕಾರ ಇನ್ನೂ ಬಿಡುಗಡೆ ಮಾಡಿಲ್ಲ. ನಾಲ್ಕು ಕಂತುಗಳಲ್ಲಿ ಬಿಡುಗಡೆಯಾಗಬೇಕಿದ್ದ ಹಣ ಮಾರ್ಚ್ ಅಂತ್ಯದವರೆಗೂ ಬಂದಿಲ್ಲ. ಇದರಿಂದ ಗ್ರಾಮ ಪಂಚಾಯಿತಿಗಳು ಕಾಮಗಾರಿಗಳನ್ನು ನಡೆಸಿ ಆರ್ಥಿಕ ಸಂಕಷ್ಟ ಕ್ಕೀಡಾಗಿವೆ ಎಂದು ಅವರು ಹೇಳಿದರು.
ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ನಡೆಸದೇ ಇರುವುದರಿಂದ ಹಾಗೂ ಆಯಾ ಕಾಲಕ್ಕೆ ಅನುದಾನವನ್ನು ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆ ಮಾಡದಿರುವುದರಿಂದ ಈ ಅನುದಾನ ತಡೆಹಿಡಿಯಲಾಗಿದೆ ಎಂದು ಆಯೋಗವೇ ಕಾರಣ ನೀಡುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾಡುವ ಅಪಚಾರ ಎಂದು ಅವರು ಟೀಕಿಸಿದರು.
ರಾಜ್ಯದಲ್ಲಿ ಬಿಜೆಪಿಯೇತರ ಸರ್ಕಾರ ಇದೆ ಎಂಬ ಕಾರಣ ನೀಡುವುದಾದರೆ, ರಾಜ್ಯದ 27 ಸಂಸದರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು, ಕೇರಳ ಮತ್ತು ತಮಿಳು ನಾಡು ರಾಜ್ಯಗಳಿಗೆ ಅನುದಾನ ಬಿಡುಗಡೆ ಯಾಗಿದೆ ಎಂದರು. ಈ ಹಿನ್ನಲೆಯಲ್ಲಿ ಕೇರಳ ರಾಜ್ಯದ ಮಾದರಿಯನ್ನು ಅನುಸರಿಸಿ ತಕ್ಷಣ ಸ್ಥಳೀಯ ಸಂಸ್ಥೆಗಳ ಚುನಾವಣೆ ಯನ್ನು ನಡೆಸಬೇಕು. ಅಧಿಕಾರ ವಿಕೇಂದ್ರೀಕರಣದಲ್ಲಿ ಕೇರಳ ಮಾದರಿಯಾಗಿದೆ. ಅಲ್ಲಿ ಪ್ರತಿ 5ವರ್ಷಗಳಿಗೊಮ್ಮೆ ಚುನಾವಣೆ ನಡೆಸುತ್ತಾರೆ. ರಾಜ್ಯದಲ್ಲಿ ಈ ಮಾದರಿ ಅನುಸರಿಸಲಿ ಎಂದವರು ಆಗ್ರಹಿಸಿದರು.
ಈ ಕುರಿತು ಸ್ಥಳೀಯ ಸಂಸದರು, ವಿಧಾನ ಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳು ಮೌನವಾಗಿರುವುದನ್ನು ಅವರು ಆಕ್ಷೇಪಿಸಿದರು.
ಕೇಂದ್ರ ಸರ್ಕಾರವು ತಕ್ಷಣ ಅನುದಾನ ಬಿಡುಗಡೆ ಮಾಡಬೇಕು. ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಆಡಳಿತ ಇಲ್ಲದಿದ್ದರೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಡಳಿತ ಇರುವುದರಿಂದ ಹಣ ಬಿಡುಗಡೆ ಮಾಡಲು ಯಾವುದೇ ಅಡ್ಡಿ ಇಲ್ಲ ಎಂದು ಅವರು ಹೇಳಿದರು.
ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಚುನಾವಣೆಗಳನ್ನು ನಡೆಸದೇ ಆರು ವರ್ಷಗಳಾಗಿದ್ದು, ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ತಕ್ಷಣ ನಡೆಸಬೇಕು ಎಂದು ಅವರು ಒತ್ತಾಯಿಸಿದರು.