ಬೆಂಗಳೂರುನಲ್ಲಿ ನಡೆದ ಸಿಇಟಿ ಪರೀಕ್ಷೆಯ ವೇಳೆ ಬ್ರಾಹ್ಮಣ ವಿದ್ಯಾರ್ಥಿಯೊಬ್ಬರಿಂದ ಜನಿವಾರ ತೆಗೆಯಿಸಿದ ಘಟನೆ ಬೆಳಕಿಗೆ ಬಂದಿದ್ದು, ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ ಬಗ್ಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಪಿ ಎಂ ಮಾಲತೇಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿ ತಕ್ಷಣ ಸರ್ಕಾರದ ಗಮನಕ್ಕೆ ತಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ. ಸುಧಾಕರ್ ಅವರನ್ನು ಸಂಪರ್ಕಿಸಿ ಘಟನೆಯ ವಿವರಗಳನ್ನು ತಿಳಿಸಲಾಗಿದ್ದು, ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಸೂಕ್ತ ಮತ್ತು ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಘಟನೆಯ ಹಿನ್ನೆಲೆಯಲ್ಲಿ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ ಪ್ರಕರಣದ ಸಮಗ್ರ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಶೀಘ್ರ ಕ್ರಮ ಕೈಗೊಂಡ ರಾಜ್ಯ ಸರ್ಕಾರದ ಕ್ರಮವನ್ನು ಸ್ವಾಗತಿಸಿದ ಪಿ ಎಂ ಮಾಲತೇಶ್, ಬ್ರಾಹ್ಮಣ ಸಮುದಾಯದ ಪರವಾಗಿ ಸರ್ಕಾರಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.