ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರಿ ತಾಲೂಕಿನ ಪುಚ್ಚೆಮೊಗರು ಬಾವದಬೈಲು ಪ್ರದೇಶದಲ್ಲಿ ದೈವದ ಭಂಡಾರ ಮೆರವಣಿಗೆಯ ವೇಳೆ ಕಾಲು ಸಂಕ ಮುರಿದು ಭಾರೀ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಟ್ಟು ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಕೋಡೆ ಬರ್ಕೆ ಧರ್ಮನೇಮಕ್ಕೆ ದೈವದ ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆಯಲ್ಲಿ ಸಾಗಿಸುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಕೊಂಬು ಹಾಗೂ ಬ್ಯಾಂಡ್ ವಾದ್ಯಗಳೊಂದಿಗೆ ಭಂಡಾರದ ಮೆರವಣಿಗೆ ನಡೆಯುತ್ತಿದ್ದು, ಏಕಾಏಕಿ ಕಾಲು ಸಂಕ ಮುರಿದು ಪಲ್ಲಕ್ಕಿ ಉರುಳಿ ಬಿದ್ದಿದೆ. ಪರಿಣಾಮವಾಗಿ ಪಲ್ಲಕ್ಕಿ ಹೊತ್ತವರು ಕೂಡ ಕೆಳಗೆ ಬಿದ್ದಿದ್ದಾರೆ.
ಕಾಲು ಸಂಕ ಮುರಿದ ವೇಳೆ ಅದರ ಬೀಮ್ ಪಲ್ಲಕ್ಕಿ ಹೊತ್ತವರ ಮೇಲೆ ಬಿದ್ದಿದ್ದು, ಇದರಿಂದ ಸುನಿಲ್ ಶೆಟ್ಟಿ (ಮಾರೂರು), ಲೋಕೇಶ್ ಭಂಡಾರಿ ಸೇರಿದಂತೆ ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ಜೊತೆಗೆ ಪಲ್ಲಕ್ಕಿಯಲ್ಲಿದ್ದ ಮೊಗಮೂರ್ತಿ ಮತ್ತು ಇತರ ಧಾರ್ಮಿಕ ಪರಿಕರಗಳಿಗೂ ಹಾನಿಯಾಗಿದೆ.
ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.