ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ.
ಮೇ 7 ಮತ್ತು 8ರಂದು ಬೆಳಗಾವಿ, ಉತ್ತರ ಕನ್ನಡ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇವುಗಳನ್ನು ಹೊರತುಪಡಿಸಿ ರಾಜ್ಯದ ಇತರ ಭಾಗಗಳಲ್ಲಿ ಮಳೆ ಮುಂದುವರಿಯಲಿದ್ದು, ಯೆಲ್ಲೋ ಅಲರ್ಟ್ ಜಾರಿಯಲ್ಲಿರುತ್ತದೆ.
ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಹ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಈ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ 30-40 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.