ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶದಾದ್ಯಂತ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗಂಭೀರ ಆತಂಕ ಸೃಷ್ಟಿಸಿದ್ದು, ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿದಂತಾಗಿದೆ ಎಂದು ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ಶ್ರೀ.ಕುಳಾಲು ಸುಬಾಶ್ಚಂದ್ರ ಶೆಟ್ಟಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಕರ್ನಾಟಕದಲ್ಲಿ ಹಲವು ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಿದ್ದ CET ವ್ಯವಸ್ಥೆಯನ್ನು ರದ್ದುಪಡಿಸಿ NEET ಜಾರಿಗೊಳಿಸಿದ ಪರಿಣಾಮ ರಾಜ್ಯದ ಸಾವಿರಾರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಅವಕಾಶ ವಂಚಿತರಾಗಿದ್ದಾರೆ. ವಿಶೇಷವಾಗಿ ಗ್ರಾಮೀಣ ಭಾಗದ ಹಾಗೂ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಇದರಿಂದ ಹೆಚ್ಚಿನ ತೊಂದರೆಯಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.
ಪ್ರಶ್ನೆಪತ್ರಿಕೆ ಸೋರಿಕೆಯಂತಹ ಗಂಭೀರ ಘಟನೆಗಳು ವಿದ್ಯಾರ್ಥಿಗಳಲ್ಲಿ ಮಾನಸಿಕ ಒತ್ತಡ ಮತ್ತು ಗೊಂದಲ ಹೆಚ್ಚಿಸುತ್ತಿವೆ. ಈಗಾಗಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳನ್ನು ಮತ್ತೆ ಪರೀಕ್ಷೆಗೆ ಒಳಪಡಿಸುವುದು ಅವರ ಆತ್ಮವಿಶ್ವಾಸದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ NEET ಪರೀಕ್ಷಾ ವ್ಯವಸ್ಥೆಯನ್ನು ರದ್ದುಪಡಿಸಿ, ರಾಜ್ಯದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಿಂದಿನ CET ವ್ಯವಸ್ಥೆಯನ್ನು ಪುನಃ ಜಾರಿಗೆ ತರಬೇಕು. ರಾಜ್ಯಗಳಿಗೆ ತಮ್ಮ ಶಿಕ್ಷಣ ವ್ಯವಸ್ಥೆಯನ್ನು ನಿರ್ವಹಿಸುವ ಸ್ವಾಯತ್ತತೆ ನೀಡುವುದು ಅಗತ್ಯ ಎಂದು ಅವರು ಒತ್ತಾಯಿಸಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ಇದರಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶ್ರೀ.ಕುಳಾಲು ಸುಬಾಶ್ಚಂದ್ರ ಶೆಟ್ಟಿ ಆಗ್ರಹಿಸಿದ್ದಾರೆ.