ಬೆಂಗಳೂರು,: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ತಗ್ಗು ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಗುಡುಗು–ಮಿಂಚಿನ ಸಂದರ್ಭಗಳಲ್ಲಿ ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಸಮೀಪ ಆಶ್ರಯ ಪಡೆಯಬಾರದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.