ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ: ಸಾವಿನ ಸುತ್ತ ಅನುಮಾನ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿರುವ ಘಟನೆ ಬಿಸಿರೋಡು ಸಮೀಪದ ಪಾಣೆಮಂಗಳೂರು ಪ್ರದೇಶದಲ್ಲಿ ನಡೆದಿದೆ.

ಗೂಡಿನ ಬಳಿ ನಿವಾಸಿ ಮಹಮ್ಮದ್ ಅವರ ಪುತ್ರ ಇರ್ಫಾನ್ (36) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ಪಾಣೆಮಂಗಳೂರು ನೂತನ ಸೇತುವೆಯ ಕೆಳಭಾಗದಲ್ಲಿ ಮೃತದೇಹ ಪತ್ತೆಯಾಗಿದೆ.

ಬಂಟ್ವಾಳ ಪುರಸಭೆಯ ಪೌರಕಾರ್ಮಿಕರು ತ್ಯಾಜ್ಯ ನಿರ್ವಹಣೆ ಕಾರ್ಯ ನಡೆಸುತ್ತಿದ್ದ ವೇಳೆ ನದಿಯಲ್ಲಿ ಮೃತದೇಹ ಕಂಡುಬಂದಿದ್ದು, ತಕ್ಷಣ ಬಂಟ್ವಾಳ ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಸ್ಥಳೀಯರು ಮೃತದೇಹವನ್ನು ಮೇಲಕ್ಕೆತ್ತಿ ಗುರುತು ಪತ್ತೆ ಮಾಡಲು ಪ್ರಯತ್ನಿಸಿದರು. ಆರಂಭದಲ್ಲಿ ಗುರುತು ಸಿಗದ ಹಿನ್ನೆಲೆಯಲ್ಲಿ ಮೃತದೇಹವನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಶವಗಾರದ ಶೀತಲೀಕರಣ ಘಟಕದಲ್ಲಿ ಇರಿಸಲಾಗಿತ್ತು.

ಸಂಜೆ ವೇಳೆಗೆ ಮೃತದೇಹದ ಗುರುತು ಪತ್ತೆಯಾಗಿದ್ದು, ಮೃತರು ಗೂಡಿನ ಬಳಿಯ ನಿವಾಸಿ ಇರ್ಫಾನ್ ಎಂದು ತಿಳಿದುಬಂದಿದೆ. ಕಳೆದ ಮೂರು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಇರ್ಫಾನ್, ಮೂರು ವರ್ಷಗಳ ಹಿಂದೆ ಊರಿಗೆ ಮರಳಿದ್ದು ಬಳಿಕ ಸ್ವಂತ ರಿಕ್ಷಾ ಖರೀದಿಸಿ ಚಾಲನೆ ಮಾಡುತ್ತಿದ್ದರು. ಅವರು ವಿವಾಹಿತರಾಗಿದ್ದು, ಮೂವರು ಮಕ್ಕಳಿದ್ದಾರೆ.

ಇರ್ಫಾನ್ ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದೀಗ ಅವರ ಮೃತದೇಹ ಸಂಶಯಾಸ್ಪದ ರೀತಿಯಲ್ಲಿ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಮೃತದೇಹದ ಕೈಗಳಲ್ಲಿ ಗಾಯಗಳಿರುವುದರಿಂದ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿರುವ ಕುಟುಂಬಸ್ಥರು, ಸಮಗ್ರ ಮರಣೋತ್ತರ ಪರೀಕ್ಷೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆ ತಿಳಿದು ಆಸ್ಪತ್ರೆಗೆ ನೂರಾರು ಜನರು ಜಮಾಯಿಸಿದ್ದು, ಬಂಟ್ವಾಳ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!